ಬೆಂಗಳೂರು: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಹಾಗೂ ರಾಜಕಾರಣಿ ವಿ.ಕೆ.ಶಶಿಕಲಾಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ಆರೋಪ ಪ್ರಕರಣ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಜಯಲಲಿತಾ ಆಪ್ತೆ ಶಶಿಕಲಾಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗಿತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಈ ಕುರಿತು ತಮಿಳುನಾಡಿನ ಶಿಕ್ಷಣ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕೆ.ಎಸ್.ಗೀತಾ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ, ಜೈಲು ಅಧೀಕ್ಷಕರಿಗೆ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಏಪ್ರಿಲ್ 22ಕ್ಕೆ ಮುಂದೂಡಿದೆ.
ಶಶಿಕಲಾ ಹಾಗೂ ಆವರ ಸಂಬಂಧಿ ಇಳವರಸಿ ಅವರಿಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿದ ಆರೋಪ ಕೇಳಿಬಂದಿತ್ತು. ಅದಕ್ಕಾಗಿ ಜೈಲು ಅಧಿಕಾರಿಗಳಿಗೆ ಕೋಟ್ಯಂತರ ರೂಪಾಯಿ ಹಣ ನೀಡಿದ ಭ್ರಷ್ಟಾಚಾರ ಆರೋಪವೂ ವ್ಯಕ್ತವಾಗಿತ್ತು. ಈ ಸಂಬಂಧ ಹಿರಿಯ ಐಎಎಸ್ ಅಧಿಕಾರಿ ವಿನಯ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಿ 295 ಪುಟಗಳ ಮಧ್ಯಂತರ ವರದಿ ಸಲ್ಲಿಸಲಾಗಿತ್ತು. ಆದರೆ, ಈವರೆಗೆ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿಲ್ಲ. ಆದ್ದರಿಂದ ಅಂತಿಮ ವರದಿ ಸಲ್ಲಿಸಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.