ಬೆಂಗಳೂರು: ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಸೇರುವಂತೆ ಆಮಿಷವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಸಲ್ಲಿಸಿದ್ದ ಅರ್ಜಿ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೇರಿ ಐವರು ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ.
ಜೆಡಿಎಸ್ ತೊರೆದು ಬಿಜೆಪಿ ಸೇರುವಂತೆ ಆಹ್ವಾನ ನೀಡಿದ್ದ ಕುರಿತು ಜೆಡಿಎಸ್ ಶಾಸಕ ಕೆ. ಶ್ರೀನಿವಾಸಗೌಡ ವಿಧಾನಸಭೆಯಲ್ಲಿ ಆರೋಪಿಸಿದ್ದರು. ಜತೆಗೆ ಈ ವಿಚಾರವನ್ನು ಹೆಚ್.ಡಿ ಕುಮಾರಸ್ವಾಮಿ ಅವರ ಗಮನಕ್ಕೂ ತಂದಿದ್ದೆ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆ ಆಧರಿಸಿ ಟಿ ಜೆ ಅಬ್ರಹಾಂ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿ, ತನಿಖೆ ನಡೆಸುವಂತೆ ಕೋರಿದ್ದಾರೆ. ದೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಜೆಡಿಎಸ್ ಶಾಸಕ ಕೆ. ಶ್ರೀನಿವಾಸಗೌಡ, ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸಚಿವ ಯೋಗೇಶ್ವರ್ ಹಾಗೂ ಶಾಸಕ ಎಸ್.ಆರ್ ವಿಶ್ವನಾಥ್ ಅವರ ವಿರುದ್ಧ ಆರೋಪ ಮಾಡಲಾಗಿದೆ.
ಜೆಡಿಎಸ್ ತೊರೆಯಲು ಶಾಸಕರಿಗೆ 5 ಕೋಟಿ ನೀಡುವುದಾಗಿ ಆಮಿಷ ಒಡ್ಡಿದ ಕುರಿತು ಮಾಹಿತಿ ಇದ್ದರೂ ಹೆಚ್ ಡಿ ಕೆ ಈ ಕುರಿತು ಪೊಲೀಸರಿಗೆ ತಿಳಿಸಿಲ್ಲ ಎಂದು ಆರೋಪಿಸಲಾಗಿದೆ. ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಐವರು ನಾಯಕರಿಗೂ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.