ಬೆಂಗಳೂರು : ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲು ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಶಾಸಕ ಎಲ್.ನಾಗೇಂದ್ರ ಅವರ ಪ್ರಶ್ನೆಗೆ ಪೂರಕವಾಗಿ ಉತ್ತರಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ವಸತಿ ನಿಲಯಗಳ ಕೊರತೆಯಿಂದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಕೇಂದ್ರಗಳಲ್ಲಿರುವ ವಸತಿ ನಿಲಯಗಳಲ್ಲಿ ಸೌಲಭ್ಯಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು.
ಈ ಕುರಿತು ಸಂಬಂಧಪಟ್ಟ ಇಲಾಖೆಗಳ ವಿಶೇಷ ಸಭೆಯನ್ನು ಕರೆದು, ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್‌ನಲ್ಲಿ ವಿಶೇಷ ಅನುದಾನ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಆದಾಯ ಹೆಚ್ಚಿಸಲು ಕ್ರಮ ಎಂದ ಶ್ರೀರಾಮುಲು :ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲು ಸರ್ಕಾರ ಈಗಾಗಲೇ ಶ್ರೀನಿವಾಸ ಮೂರ್ತಿ ಅವರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ, ಸಾರ್ವಜನಿಕರಿಗೆ ಹೊರೆಯಾಗದಂತೆ ಸಂಸ್ಥೆಯನ್ನು ಲಾಭದಾಯಕವಾಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಅವರು ಶಾಸಕ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.