Karnataka Budget: ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್; 10ನೇ ತರಗತಿವರೆಗೂ ಮಕ್ಕಳಿಗೆ ಮೊಟ್ಟೆ/ ಬಾಳೆಹಣ್ಣು ವಿತರಣೆ - ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್ ಮಂಡಿಸಿದ್ದು, ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿದ್ದಾರೆ.
ಶಿಕ್ಷಣ
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ನಲ್ಲಿ ಶಿಕ್ಷಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಮಹತ್ತರ ನಿರ್ಧಾರ ಪ್ರಕಟಿಸಿದ್ದಾರೆ. ʻಶಿಕ್ಷಣವು ವಿಮೋಚನಾ ಶಕ್ತಿಯಾಗಿದೆ ಮತ್ತು ನಮ್ಮ ಕಾಲದಲ್ಲಿ ಜನತಂತ್ರವನ್ನು ಸ್ಥಾಪಿಸುವ ಶಕ್ತಿಯೂ ಆಗಿದೆ; ಶಿಕ್ಷಣವು ಜಾತಿ ಮತ್ತು ವರ್ಗದ ನಿರ್ಬಂಧಗಳನ್ನು ತೊಲಗಿಸಿ, ಹುಟ್ಟಿನಿಂದ ಅಥವಾ ಇನ್ನಾವುದೇ ಪರಿಸ್ಥಿತಿಯಿಂದ ಉದ್ಭವಿಸಿದ ಅಸಮಾನತೆಗಳನ್ನು ನಿವಾರಿಸುತ್ತದೆʼ ಎಂಬ ಇಂದಿರಾ ಗಾಂಧಿ ಮಾತು ಉಲ್ಲೇಖಿಸಿ ಗುಣಮಟ್ಟದ ಶಿಕ್ಷಣಕ್ಕೆ ಮಹತ್ವ ನೀಡಿದ್ದಾರೆ.
- ಪಠ್ಯ ಪರಿಷ್ಕರಣೆ ವಿಚಾರ: ಶಾಲಾ ಶಿಕ್ಷಣವು ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ.
- ಶಾಲಾ-ಕಾಲೇಜುಗಳಿಗೆ ಸೌಲಭ್ಯ: ರಾಜ್ಯದ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಉತ್ತಮ ಸೌಲಭ್ಯಗಳನ್ನು ನೀಡಲು ಶಾಲಾ ಕೊಠಡಿಗಳಿಗೆ 310 ಕೋಟಿ ರೂ.ಗಳು ಹಾಗೂ ಪದವಿ ಪೂರ್ವ ಕಾಲೇಜು ಕೊಠಡಿಗಳಿಗೆ 240 ಕೋಟಿ ರೂ. ಸೇರಿದಂತೆ ಒಟ್ಟು 550 ಕೋಟಿ ರೂ.ಗಳ ವೆಚ್ಚದಲ್ಲಿ 8,311 ಕೊಠಡಿಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಲಾಗುವುದು.
- ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯದ ದೃಷ್ಟಿಯಿಂದ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ, ಕಡಿಮೆ ಶೌಚಾಲಯಗಳಿರುವ 5,775 ಶಾಲೆಗಳಲ್ಲಿ ಹಾಗೂ 150 ಕಾಲೇಜುಗಳಲ್ಲಿ ಶೌಚಾಲಯ ಘಟಕಗಳನ್ನು ನರೇಗಾ ಯೋಜನೆಯ ಸಂಯೋಜನೆಯೊಂದಿಗೆ 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು.
- ಹಳೆಯ ಶಾಲಾ ಕಾಲೇಜು ಕಟ್ಟಡಗಳು ಹಾಗೂ ಮಳೆಯಿಂದಾಗಿ ಶಿಥಿಲಗೊಂಡಿರುವ 3,833 ಶಾಲೆಗಳು ಹಾಗೂ 724 ಪದವಿ ಪೂರ್ವ ಕಾಲೇಜು ಕೊಠಡಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ದುರಸ್ತಿಗೊಳಿಸುವ ಮೂಲಕ ಬಳಕೆಗೆ ಯೋಗ್ಯಗೊಳಿಸಲಾಗುವುದು.
- ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ.ನಿಂದ 45,000 ರೂ.ಗಳವರೆಗೆ ಹೆಚ್ಚಿಸಿ 47,272 ಶಾಲೆಗಳು ಹಾಗೂ 1,231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆಯಾಗಿ 153 ಕೋಟಿ ರೂ. ಅನುದಾನ ಒದಗಿಸಲಾಗುವುದು.
- ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ಬಾರಿ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ.ಗಳ ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.
- ಮಕ್ಕಳಲ್ಲಿ ಉಂಟಾಗಿರುವ ಕಲಿಕಾ ನ್ಯೂನತೆಯನ್ನು ಹೋಗಲಾಡಿಸಲು ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ʻಮರುಸಿಂಚನʼ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ವಿಶೇಷ ತರಬೇತಿಯನ್ನು ನೀಡಲಾಗುವುದು.
- ಶಾಲಾ ಶಿಕ್ಷಣ ಇಲಾಖೆಯಲ್ಲಿನ ವಿವಿಧ ಕಾರ್ಯಕ್ರಮಗಳನ್ನು ನಿರ್ವಹಿಸುವ ಸ್ಯಾಟ್ಸ್ ತಂತ್ರಾಂಶವನ್ನು SATS 2.0 ಎಂದು ಉನ್ನತೀಕರಿಸಲಾಗುವುದು.
- ಹೊಸ ಕಲ್ಪನೆಯನ್ನು ವಾಸ್ತವಕ್ಕೆ ತರಲು ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಮಾಧ್ಯಮಿಕ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಇನ್ನೋವೇಶನ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು. 2023-24ನೇ ಸಾಲಿನಲ್ಲಿ ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ ನಾಲ್ಕು ಪ್ರಯೋಗಾಲಯಗಳನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು.
- ಶಿಕ್ಷಣ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಸ್ಥಳಾವಕಾಶವುಳ್ಳ ಶಾಲೆಗಳ ಸುತ್ತಮುತ್ತ ಒಂದು ವರ್ಷದ ಕಾಲಾವಧಿಯಲ್ಲಿ 50 ಲಕ್ಷ ಸಸಿಗಳನ್ನು ನೆಡುವ ವಿನೂತನ ʻಸಸ್ಯ ಶ್ಯಾಮಲʼ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು.
- ರಾಜ್ಯದ ಸಾಹಿತಿಗಳ ಹಾಗೂ ಪ್ರಕಾಶಕರ ಬೇಡಿಕೆಗಳಿಗೆ ಸ್ಪಂದಿಸಿ ಸಾರ್ವಜನಿಕ ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಖರೀದಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ. ಅನುದಾನ ಒದಗಿಸಲಾಗುವುದು.
- ಕೇಂದ್ರ ಸರ್ಕಾರ ಜಾರಿಗೊಳಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿರುವಂತಹ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿರುವ ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದೆ. ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ. ರಾಜ್ಯದ ಅಸ್ಮಿತೆಯನ್ನು ಎತ್ತಿ ಹಿಡಿಯುವ, ಉನ್ನತ ಶಿಕ್ಷಣವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಶಿಕ್ಷಣವನ್ನು ನೀಡಿ ಯುವಜನರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲಗೊಳಿಸಲು ಒತ್ತು ನೀಡುವ ನಿಟ್ಟಿನಲ್ಲಿ ಸ್ಥಳೀಯವಾದ ಸಾಮಾಜಿಕ, ಸಾಂಸ್ಕೃತಿಕ ಮತ್ತು ಆರ್ಥಿಕ ವಾಸ್ತವಾಂಶಗಳನ್ನು ಒಳಗೊಂಡ ಹೊಸ ಶಿಕ್ಷಣ ನೀತಿಯನ್ನು ರೂಪಿಸಲಾಗುವುದು.
- ಬೆಂಗಳೂರಿನಲ್ಲಿರುವ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ ಯೂನಿವರ್ಸಿಟಿಯನ್ನು (UVCE) ಉನ್ನತೀಕರಣಗೊಳಿಸಲು ಮೂಲಭೂತ ಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ಒದಗಿಸಲಾಗುವುದು.
- ನಕಲಿ ಅಂಕಪಟ್ಟಿ ಹಾವಳಿಯನ್ನು ತಪ್ಪಿಸುವ ದೃಷ್ಟಿಯಿಂದ ರಾಜ್ಯದ ಎಲ್ಲಾ ಉನ್ನತ ಶಿಕ್ಷಣದ ವಿದ್ಯಾರ್ಥಿಗಳು Academic Bank of Credits ನಲ್ಲಿ ನೋಂದಾಯಿಸಿಕೊಂಡು ಹಾಗೂ ನೇಮಕಾತಿಯಲ್ಲಿ NAD/Digilocker ನಲ್ಲಿನ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲು ಕ್ರಮಕೈಗೊಳ್ಳಲಾಗುವುದು.
- ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯ ಹೊಂದಿರುವ 224 ವಸತಿ ನಿಲಯಗಳನ್ನು ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವರ್ಗಾಯಿಸಲಾಗುವುದು.
- ಉನ್ನತ ಶಿಕ್ಷಣ ಇಲಾಖೆಯಡಿ ಎಲ್ಲಾ ಶಿಷ್ಯ ವೇತನ ಕಾರ್ಯಕ್ರಮಗಳನ್ನು ಒಗ್ಗೂಡಿಸಿ 'ಏಕ ಶಿಷ್ಯ ವೇತನ' ಕಾರ್ಯಕ್ರಮದಡಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು.
- ಸಾರ್ವಜನಿಕ ವಿಶ್ವವಿದ್ಯಾಲಯಗಳ ಆಡಳಿತ ವ್ಯವಸ್ಥೆಯನ್ನು ಉತ್ತಮಪಡಿಸಲು 10 ಸುಶಾಸನ ಸೂಚ್ಯಂಕಗಳನ್ನು (Good Governance Indicators) ರಚಿಸಲಾಗಿದ್ದು, ಇದರನ್ವಯ ಅತ್ಯುತ್ತಮ ಸಾಧನೆ ಮಾಡುವ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷ ರೂ. ಗಳಂತೆ ಪ್ರೋತ್ಸಾಹ ಧನ ನೀಡಲಾಗುವುದು.
- ವೃತ್ತಿ ಚೈತನ್ಯ ಯೋಜನೆಯಡಿಯಲ್ಲಿ ಇಲಾಖೆಯ ಸುಮಾರು 7,800 ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ಕಾರ್ಯಕ್ರಮಗಳನ್ನು ಧಾರವಾಡದ ಉನ್ನತ ಶಿಕ್ಷಣ ಅಕಾಡೆಮಿಯಲ್ಲಿ 10 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆಯೋಜಿಸಲಾಗುವುದು.
- ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ Ph.D. ಸೀಟುಗಳನ್ನು ಭರ್ತಿ ಮಾಡುವ ವಿಧಾನದಲ್ಲಿ ಏಕರೂಪತೆಯನ್ನು ತರಲಾಗುವುದು. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯಗಳ Ph.D. ಸೀಟುಗಳಿಗೆ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಶೇ.40 ಸೀಟುಗಳಿಗೆ ಕೌನ್ಸೆಲಿಂಗ್ ನಡೆಸಲಾಗುವುದು.
- ಬೆಂಗಳೂರಿನ ಎಸ್.ಕೆ.ಎಸ್.ಜೆ.ಟಿ.ಐ ಎಂಜಿನಿಯರಿಂಗ್ ಕಾಲೇಜಿನಲ್ಲಿರುವ ಜವಳಿ ತಂತ್ರಜ್ಞಾನ ವಿಭಾಗವನ್ನು ರಾಷ್ಟ್ರೀಯ Technical Textile ಅಭಿಯಾನ ಮತ್ತು ಪಿಎಂ-ಮಿತ್ರ ಯೋಜನೆಗಳಡಿ Smart and Technical Textile Centre ಆಗಿ ಉನ್ನತೀಕರಿಸಲಾಗುವುದು.
- ರಾಜ್ಯದ ಎಲ್ಲಾ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬ್ರಿಟಿಷ್ ಕೌನ್ಸಿಲ್ ಮತ್ತು ಪ್ರಾದೇಶಿಕ ಆಂಗ್ಲ ಸಂಸ್ಥೆಯ ಸಹಕಾರದೊಂದಿಗೆ ವ್ಯಾವಹಾರಿಕ ಆಂಗ್ಲ ತರಗತಿಗಳನ್ನು ಪ್ರಾರಂಭಿಸಲಾಗುವುದು.
- ಉನ್ನತ ಶಿಕ್ಷಣ ಪಡೆಯಲು ಇರುವ ಭಾಷೆಯ ತೊಡಕು ನಿವಾರಿಸಲು ಕರ್ನಾಟಕದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅನುವಾಗುವಂತೆ ವ್ಯಾಪಕ ಬಳಕೆಯಲ್ಲಿರುವ ರೆಫರೆನ್ಸ್ ಪುಸ್ತಕಗಳನ್ನು ಹಾಗೂ ಪಠ್ಯ ವಿಷಯಗಳನ್ನು ಭಾಷಾಂತರಿಸಲು ಕ್ರಮ ಕೈಗೊಳ್ಳಲಾಗುವುದು.
Last Updated : Jul 7, 2023, 8:18 PM IST