ದೊಡ್ಡಬಳ್ಳಾಪುರ:ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದು, ವಾಹನಕ್ಕೆ ಬೆಂಕಿ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ವಾರಾಂತ್ಯದ ದಿನಗಳಲ್ಲಿ ಆಂಧ್ರದ ಹಿಂದೂಪುರದಿಂದ ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಗೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುವುದು ಸಾಮಾನ್ಯವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.
ಇಂದು ನಡೆದಿದ್ದೇನು?: ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ಬಳಿ ಶ್ರೀರಾಮಸೇನೆ ಕಾರ್ಯಕರ್ತರು ವಾಹನಗಳನ್ನು ತಡೆದು ಪರಿಶೀಲಿಸಿದ್ದಾರೆ. ಈ ಸಂದರ್ಭದಲ್ಲಿ ವಾಹನಗಳಲ್ಲಿ ಗೋಮಾಂಸ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡು ಗೋಮಾಂಸ ಸಾಗಾಟ ಮಾಡಿದ್ದ ಕಾರಿಗೆ ಬೆಂಕಿ ಇಟ್ಟರು. ಆರೋಪಿಗಳನ್ನು ರಸ್ತೆಯಲ್ಲೇ ಕೂರಿಸಿದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪ್ರತಿಭಟನೆ ನಡೆಸಿ ಒತ್ತಾಯಿಸಿದರು. ದೊಡ್ಡಬಳ್ಳಾಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.