ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡ ಬೆನ್ನಲ್ಲೇ ನಾಳೆಯಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಈ ಬಾರಿ ಒಟ್ಟು 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ 3,305 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲಾ ಸಿದ್ಧತೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದೆ.
ವಿದ್ಯಾರ್ಥಿ ಜೀವನದ ಬಹುಮುಖ್ಯ ಘಟ್ಟವಾದ ಎಸ್ಎಸ್ಎಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15 ರವರೆಗೂ ಮುಖ್ಯ ಪರೀಕ್ಷೆ ನಡೆಯಲಿದೆ. ಈ ಬಾರಿಯ ಪರೀಕ್ಷೆಗೆ ಒಟ್ಟು 15,498 ಶಾಲೆಗಳಿಂದ ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ. ಇದರಲ್ಲಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗು 6,060 ಅನುದಾನ ರಹಿತ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ಶಾಲಾ ವಿದ್ಯಾರ್ಥಿಗಳಾಗಿದ್ದು, 20,750 ಪುನರಾವರ್ತಿತ ವಿದ್ಯಾರ್ಥಿಗಳು, 18,272 ಖಾಸಗಿ ಅಭ್ಯರ್ಥಿಗಳು, 8,862 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು, 2010 ಕ್ಕಿಂತ ಹಿಂದಿನ ಸಾಲಿನ 301 ಪುನರಾವರ್ತಿತ ಅಭ್ಯರ್ಥಿಗಳು, 2010 ಕ್ಕಿಂತ ಹಿಂದಿನ ಸಾಲಿನ 15 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಈ ಬಾರಿ ಪರೀಕ್ಷೆ ಬರೆಯುತ್ತಿದ್ದಾರೆ.
1845 ಕ್ಲಸ್ಟರ್ ಪರೀಕ್ಷಾ ಕೇಂದ್ರ, 1354 ನಾನ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳು, 106 ಖಾಸಗಿ ಪರೀಕ್ಷಾ ಕೇಂದ್ರಗಳಲ್ಲಿ ಹತ್ತನೇ ತರಗತಿ ಪರೀಕ್ಷೆ ನಡೆಯಲಿದೆ. 3,60,862 ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು, 2,20,831 ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು, 2,61,118 ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಆ ವ್ಯಾಪ್ತಿಯಲ್ಲಿ ಝೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ಗಳನ್ನು ತೆರೆಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.