ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಜೂನ್ 27 ರಿಂದ ಜುಲೈ 4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಮಂಡಳಿ ವೆಬ್ಸೈಟ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಬಹುದು. ಇಲ್ಲವೇ ಶಾಲಾ ಆಡಳಿತ ಮಂಡಳಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸಬಹುದು ಎಂದು ತಿಳಿಸಲಾಗಿದೆ.
ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಮೇ 19ರಂದು ಪ್ರಕಟವಾಗಿತ್ತು. ಶೇ. 85.63% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಹುಡುಗರು 81.30% ಉತ್ತೀರ್ಣರಾಗಿದ್ದರು. ಪರೀಕ್ಷೆ ಬರೆದ 8 ಲಕ್ಷದ 53 ಸಾವಿರದ 436 ವಿದ್ಯಾರ್ಥಿಗಳ ಪೈಕಿ, ಈ ಬಾರಿ 7 ಲಕ್ಷದ 30 ಸಾವಿರದ 881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 145 ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ.