ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2022-23 ನೇ ಸಾಲಿನ ಬಜೆಟ್ನಲ್ಲಿ ನೀರಾವರಿ ಕ್ಷೇತ್ರಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ. ಕೃಷ್ಣ ಮೇಲ್ದಂಡೆ 3ನೇ ಹಂತಕ್ಕೆ 5 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದ್ದು, ಕಳಸಾ ಬಂಡೂರಿ ಯೋಜನೆಗೆ 1000 ಕೋಟಿ ರೂಪಾಯಿ ನೀಡುವುದಾಗಿ ಸರ್ಕಾರ ಘೋಷಿಸಿದೆ.
ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ 3,000 ಕೋಟಿ ರೂ.ಗಳ ಅನುದಾನ ನೀಡಲಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆಗೆ 3000 ಕೋಟಿ ರೂ. ಮತ್ತು ನವಲೆ ಸಮತೋಲನಾ ಜಲಾಶಯ ನಿರ್ಮಾಣಕ್ಕೆ 1000 ಕೋಟಿ ರೂ. ಅನುದಾನ ನೀಡಲಾಗಿದೆ.
ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-1 ಮತ್ತು 2ರಲ್ಲಿನ ಬೂದಿಹಾಳ, ಪೀರಾಪುರ, ನಂದವಾಡಗಿ, ನಾರಾಯಣಪುರ ಬಲದಂಡೆ (9ಎ) ಕಾಲುವೆ ವಿಸ್ತರಣೆ ಯೋಜನೆ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕೆರೆಗಳ ಸಮಗ್ರ ಅಭಿವೃದ್ಧಿಗೆ ಒಟ್ಟು 500 ಕೋಟಿ ರೂ. ಘೋಷಿಸಲಾಗಿದೆ. ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಹಣ ನೀಡಲಾಗಿದೆ.