ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಪತ್ನಿ ವರಲಕ್ಷ್ಮಿ ಗುಂಡೂರಾವ್ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್ ಸೇರಿದಂತೆ ಹಲವು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ಟ್ರೀಟ್ನಲ್ಲಿ, ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಅವರ ಪತ್ನಿ ವರಲಕ್ಷ್ಮಿ ಗುಂಡೂರಾವ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಕುಟುಂಬದವರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ವರಲಕ್ಷ್ಮಿ ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರ ಆಗಿದೆ. ದುಃಖದ ಸಂದರ್ಭದಲ್ಲಿ ಮೃತರ ಪುತ್ರ ದಿನೇಶ್ ಗುಂಡೂರಾವ್ ಸೇರಿದಂತೆ ಅವರ ಕುಟುಂಬದ ಎಲ್ಲಾ ಸದಸ್ಯರಿಗೂ ಅಗಲಿಕೆಯ ನೋವು ಭರಿಸುವ ಶಕ್ತಿ ಬರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್ ನಲ್ಲಿ, ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ದುಃಖವಾಯಿತು. ದಿನೇಶ್ ಗುಂಡೂರಾವ್ ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದು, ದೇವರು ಮೃತರ ಆತ್ಮಕ್ಕೆ ಶಾಂತಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ವಿಧಾನಪರಿಷತ್ ಪ್ರತಿಪಕ್ಷ ನಾಯಕ ಎಸ್ಆರ್ ಪಾಟೀಲ ತಮ್ಮ ಟ್ವೀಟ್ನಲ್ಲಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್. ಗುಂಡೂರಾವ್ ಅವರ ಪತ್ನಿ ವರಲಕ್ಷ್ಮೀ ಗುಂಡೂರಾವ್ ವಿಧಿವಶರಾಗಿದ್ದಾರೆ. ಗುಂಡೂರಾವ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದಿದ್ದಾರೆ.
ಇನ್ನು ಮಾಜಿ ಸಚಿವ ಜಮೀರ್ ಅಹ್ಮದ್ ಟ್ವೀಟ್ ಮಾಡಿದ್ದು, ಆತ್ಮೀಯರಾದ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮೀ ಅಮ್ಮನವರು ದೈವಾಧೀನರಾದ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ ಮತ್ತು ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಓದಿ; ದಿನೇಶ್ ಗುಂಡೂರಾವ್ಗೆ ಮಾತೃ ವಿಯೋಗ: ವರಲಕ್ಷ್ಮಿ ಗುಂಡೂರಾವ್ ಇನ್ನಿಲ್ಲ