ಕರ್ನಾಟಕ

karnataka

ETV Bharat / state

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕೋವಿಡ್​ ಮಾರ್ಗಸೂಚಿ ಹೊರಡಿಸಿದ ಸರ್ಕಾರ

ಹಬ್ಬಗಳ ಕಾಲಾವಧಿಯಲ್ಲಿ ಜನ ಸಂಚಾರ ಮತ್ತು ಜನರ ಒಗ್ಗೂಡುವಿಕೆ ಹೆಚ್ಚಾಗುವುದರಿಂದ ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು, ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ. ಈ ಸಂಬಂಧ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

ರಾಜ್ಯ ಸರ್ಕಾರ
ರಾಜ್ಯ ಸರ್ಕಾರ

By

Published : Oct 30, 2021, 4:14 PM IST

ಬೆಂಗಳೂರು :ರಾಜ್ಯಾದ್ಯಂತ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮತ್ತು ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಸರಳ ಹಾಗೂ ಗೌರವಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕೋವಿಡ್-19 ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಲು ಅಗತ್ಯ ಮುಂಜಾಗ್ರತ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಹಬ್ಬಗಳ ಕಾಲಾವಧಿಯಲ್ಲಿ ಜನ ಸಂಚಾರ ಮತ್ತು ಜನರ ಒಗ್ಗೂಡುವಿಕೆ ಮತ್ತು ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು, ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಇರುತ್ತದೆ. ಈ ಸಂಬಂಧ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

  • ಕೋವಿಡ್-19 ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ, ಪ್ರಸಕ್ತ ವರ್ಷದ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಮತ್ತು ಗೌರವ ಪೂರ್ವಕವಾಗಿ ಆಚರಿಸುವುದು.
  • ಕನ್ನಡ ರಾಜ್ಯೋತ್ಸವ ಸಮಾರಂಭದ ಆಚರಣೆಯ ವೇಳೆ ರಾಜ್ಯಾದ್ಯಂತ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಪ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸುವ ಷರತ್ತಿಗೆ ಒಳಪಟ್ಟು ಗರಿಷ್ಠ 500 ಜನರು ಸೇರಲು ಮಾತ್ರ ಅನುಮತಿಸಿದೆ.
  • ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.
  • ರಾಜ್ಯೋತ್ಸವ ಆಚರಣೆಯು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗೌರವಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.
  • ರಾಜ್ಯದಲ್ಲಿನ ಸಂಘ-ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್/ ಮಹಾನಗರ ಪಾಲಿಕೆ / ಸ್ಥಳೀಯ ಸಂಸ್ಥೆ/ವಿದ್ಯುತ್ ಇಲಾಖೆ / ಆರೋಗ್ಯ ಇಲಾಖೆ / ಅಗ್ನಿಶಾಮಕ ಇಲಾಖೆ / ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ 34 ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು.
  • ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗುವ ಸಾಂಸ್ಕೃತಿಕ / ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಕನಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.
  • ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ರಾಜ್ಯೋತ್ಸವದಲ್ಲಿ ಭಾಗವಹಿಸದಂತೆ ಎಚ್ಚರವಹಿಸಬೇಕು.
  • ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು, ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಕೃತಿ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ / ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  • ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details