ಬೆಂಗಳೂರು : ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು ಈಗಾಗಲೇ ಮುನ್ನೆಚ್ಚರಿಕೆ ನೀಡಿದ್ದಾರೆ. ಹಾಗಾಗಿ, ಮಹಾಮಾರಿಯನ್ನು ಕಟ್ಟಿಹಾಕಲು ಲಸಿಕೆ ಒಂದೇ ಪರಿಹಾರ ಎಂಬ ನಿರ್ಧಾರಕ್ಕೆ ಬಂದಿರುವ ರಾಜ್ಯ ಸರ್ಕಾರ ತಿಂಗಳ ಲಸಿಕೆ ಕೋಟಾವನ್ನು 1.5 ಕೋಟಿ ಡೋಸ್ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ದೆಹಲಿ ಪ್ರವಾಸದಲ್ಲಿರುವ ಆರೋಗ್ಯ ಸಚಿವ ಡಾ. ಸುಧಾಕರ್ ಮಂಗಳವಾರ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರನ್ನು ಭೇಟಿ ಮಾಡಿದರು. ಈ ವೇಳೆ ರಾಜ್ಯದ ಕೋವಿಡ್ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದ ಅವರು, ಹೆಚ್ಚುವರಿ ಲಸಿಕೆಯ ಅಗತ್ಯತೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಪ್ರಸ್ತುತ ನೀಡುತ್ತಿರುವ ಸಲಿಕೆ ಪ್ರಮಾಣ ಸಾಲುತ್ತಿಲ್ಲ. ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲರಿಗೂ ಲಸಿಕೆ ನೀಡುವ ಗುರಿ ಹೊಂದಿದ್ದೇವೆ. ಹಾಗಾಗಿ, ರಾಜ್ಯಕ್ಕೆ ತಿಂಗಳಿಗೆ 1.5 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸುವಂತೆ ಮನವಿ ಮಾಡಿದರು. ನಂತರ ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಆಸ್ಪತ್ರೆ ಮೇಲ್ದರ್ಜೆಗೇರಿಸಲು ಅನುದಾನಕ್ಕೆ ಮನವಿ :ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಂಜೂರಾತಿಯಲ್ಲಿ ನಿರ್ಮಿಸುತ್ತಿರುವ ಹೊಸ ಮೆಡಿಕಲ್ ಕಾಲೇಜುಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ರಾಜ್ಯದ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುತ್ತಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಇನ್ನೂ 250 ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನ ನೀಡಬೇಕು ಎಂದು ಸಚಿವ ಸುಧಾಕರ್ ಕೇಂದ್ರ ಸಚಿವರನ್ನು ಕೋರಿದರು.