ಬೆಂಗಳೂರು: ಖಾಸಗಿ ಲೇವಾದೇವಿದಾರರಿಂದ ಪಡೆದು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾದ ರೈತಾಪಿ ಕುಟುಂಬಗಳಿಗೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ರೈತರಿಗೆ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ನಷ್ಟ ವಿಮೆ ಪರಿಹಾರ ಸಿಕ್ಕಿಲ್ಲ ಎಂದು ಆರೋಪಿಸಿ, ಅಖಂಡ ಕರ್ನಾಟಕ ರೈತ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಕೃಷಿ ಇಲಾಖೆ ಆಯುಕ್ತ ಬ್ರಿಜೇಶ್ ಕುಮಾರ್ ದೀಕ್ಷಿತ್ ಸಲ್ಲಿಸಿದ ಪ್ರಮಾಣಪತ್ರ ಪರಿಶೀಲಿಸಿದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಸಾಲ ಮರು ಪಾವತಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಆದರೆ, ಖಾಸಗಿ ಲೇವಾದೇವಿದಾರರಿಂದ ಸಾಲ ಮಾಡಿದ ರೈತರಿಗೆ ಪರಿಹಾರ ನೀಡಲು ಅವಕಾಶವಿಲ್ಲ ಎಂಬ ಸರ್ಕಾರದ ವಾದ ಒಪ್ಪಲು ಸಾಧ್ಯವಿಲ್ಲ. ಖಾಸಗಿ ಲೇವಾದೇವಿದಾರರ ಬಳಿ ಹೋಗುವ ಸ್ಥಿತಿ ರೈತರಿಗೆ ಬಂದಿದ್ದಾರೂ ಹೇಗೆ ಎಂಬುದನ್ನು ಸರ್ಕಾರ ಯೋಚಿಸಬೇಕಲ್ಲವೇ ಎಂದು ಪ್ರಶ್ನಿಸಿತು. ಹಾಗೆಯೇ ಈ ಬಗ್ಗೆ ನಿಲುವು ಸ್ಪಷ್ಟಪಡಿಸಿ ಮೂರು ವಾರಗಳಲ್ಲಿ ಪ್ರಮಾಣಪತ್ರ ಸಲ್ಲಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿತು.