ಬೆಂಗಳೂರು: ಅನಾರೋಗ್ಯದಿಂದ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಡಿಯೋ-ಥೊರಾಸಿಕ್ ವಾರ್ಡ್‌ನಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ, ರಾಷ್ಟ್ರೀಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅನಾರೋಗ್ಯಕ್ಕೆ ಒಳಗಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ಎದೆ ನೋವಿನಿಂದ ಮನಮೋಹನ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ, ಮತ್ತು ಉತ್ತಮ ಆರೋಗ್ಯವನ್ನು ಪಡೆಯಲಿ ಎಂದು ಬಯಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಟ್ವಿಟ್ನಲ್ಲಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯದ ಬಗ್ಗೆ ನನಗೆ ತೀವ್ರ ಕಾಳಜಿ ಇದೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಕೂಡ ದೇಶದ ಶತಕೋಟಿಗೂ ಹೆಚ್ಚು ಭಾರತೀಯರೊಂದಿಗೆ ಬೇಡಿಕೊಳ್ಳುತ್ತಿದ್ದೇನೆ. ಮತ್ತು ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಡಾ. ಮನಮೋಹನ್ ಸಿಂಗ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ದೇವರನ್ನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇವರಲ್ಲದೆ ಇನ್ನೂ ಹಲವು ರಾಜ್ಯ ನಾಯಕರು ಮನಮೋಹನ್ ಸಿಂಗ್ ಆದಷ್ಟು ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಆಚೆ ಬರಲಿ ಎಂದು ಪ್ರಾರ್ಥಿಸಿದ್ದಾರೆ.