ಬೆಂಗಳೂರು:ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ಅಗತ್ಯ ಸೂಚನೆಗಳನ್ನ ಹೊರಡಿಸಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಕ್ರಮವಹಿಸಲು ಸೂಚಿಸಿದ್ದು ಪರೀಕ್ಷೆಯಲ್ಲಿ, ಮೊಬೈಲ್ ಫೋನ್‌ಗಳನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರಕ್ಕೆ ಇಲಾಖೆಯ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವುಂತೆ ಸೂಚಿಸಲಾಗಿದೆ.
ಒಂದು ವೇಳೆ ಯಾರಾದರೂ ಪರೀಕ್ಷಾ ಕಾರ್ಯಗಳಿಗೆ ಅಡ್ಡಿ ಉಂಟು ಮಾಡಿದರೆ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಿತ ಪ್ರದೇಶವೆಂದು ಆದೇಶಿಸಲಾಗಿದೆ. ಮೊಬೈಲ್ ಅಷ್ಟೇ ಅಲ್ಲದೇ ಇಲೆಕ್ಟ್ರಾನಿಕ್ ಉಪಕರಣಗಳ ನಿಷೇಧ ಮಾಡಲಾಗಿದೆ. ಇ-ಕ್ಯಾಮರಾ, ಲ್ಯಾಪ್ಟಾಪ್ ಇತ್ಯಾದಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಸಂಪೂರ್ಣ ನಿಷೇಧಿಸಿದೆ. ಯಾವುದೇ ರೀತಿಯ ವಿದ್ಯುನ್ಮಾನ ಉಪಕರಣಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗಿದೆ. ಪರೀಕ್ಷಾ ಅಕ್ರಮಗಳ ತಡೆಗೆ ಕರ್ನಾಟಕ ರಾಜ್ಯ ಶಿಕ್ಷಣ ಕಾಯ್ದೆ 1983 ತಿದ್ದುಪಡಿ ಕಾಯ್ದೆ 2017ನ್ನು ಜಾರಿಗೆ ತರಲಾಗಿದೆ.
ಪರೀಕ್ಷಾರ್ಥಿಗಳು ನಕಲು ಮಾಡುವುದು, ನಕಲು ಮಾಡಲು ಸಹಾಯ ಮಾಡುವುದು, ಬದಲಿ ವ್ಯಕ್ತಿಯಾಗಿ ಪರೀಕ್ಷೆ ಬರೆಯುವುದು, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ಮೊಬೈಲ್ ಉಪಯೋಗಿಸುವುದು/ಬಳಸುವುದು ಮಾಡಿದರೆ, 5 ವರ್ಷಗಳ ಕಾಲ ಸೆರೆವಾಸ ಅಥವಾ 5 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ಇನ್ನು ಕೊಠಡಿ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಅಕ್ರಮ ಎಸಗುವವರ ವಿರುದ್ಧ ಸೂಕ್ತ ಕಾನೂನು ಕ್ರಮಜರುಗಿಸಲು ಸೂಚಿಸಲಾಗಿದೆ.