ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಕಠಿಣ ಕ್ರಮಕ್ಕೆ ಹೈಕೋರ್ಟ್ ಸೂಚನೆ

ಚಿಕಿತ್ಸೆ ಸಿಗದೆ ರೋಗಿಗಳು ಅಲೆದು ಮೃತಪಡುತ್ತಿದ್ದಾರೆ ಎಂಬುದು ಅತ್ಯಂತ ಗಂಭೀರ ವಿಚಾರ. ಈ ಕುರಿತು ಸರ್ಕಾರ ಶೀಘ್ರವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಸರ್ಕಾರಕ್ಕೆ ಸೂಚಿಸಿತು.

ಹೈಕೋರ್ಟ್ ಸೂಚನೆ
ಹೈಕೋರ್ಟ್ ಸೂಚನೆ

By

Published : Jul 10, 2020, 9:39 PM IST

ಬೆಂಗಳೂರು: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ನಿರ್ಲಕ್ಷ್ಯ ತೋರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಕೊರೊನಾ ಪೀಡಿತರಿಗೆ ಚಿಕಿತ್ಸೆ ನೀಡುವ ಮತ್ತು ಶುಲ್ಕ ನಿಗದಿಪಡಿಸುವ ವಿಚಾರಗಳಿಗೆ ಸಂಬಂಧಿಸಿದಂತೆ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಕೀಲರು ಪೀಠಕ್ಕೆ ವಿವರಣೆ ನೀಡಿ, ಇತ್ತೀಚೆಗೆ ರೋಗಿಯೊಬ್ಬರು 9 ಆಸ್ಪತ್ರೆಗಳಿಗೆ ಅಲೆದು ಎಲ್ಲಿಯೂ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿಯೂ ವರದಿಯಾಗಿದೆ. ಇಂತಹ ಆಸ್ಪತ್ರೆಗಳ ವಿರುದ್ಧ ಕೂಡಲೇ ಕ್ರಮ ಜರುಗಿಸುವ ಅಗತ್ಯವಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಚಿಕಿತ್ಸೆ ಸಿಗದೆ ರೋಗಿಗಳು ಅಲೆದು ಮೃತಪಡುತ್ತಿದ್ದಾರೆ ಎಂಬುದು ಅತ್ಯಂತ ಗಂಭೀರ ವಿಚಾರ. ಈ ಕುರಿತು ಸರ್ಕಾರ ಶೀಘ್ರವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳಿಗೆ ಕಠಿಣ ಸಂದೇಶ ರವಾನಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿತು.

ಅಲ್ಲದೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಅನುಸರಿಸುತ್ತಿರುವ ಕ್ರಮಗಳೇನು? ಹಾಗೆಯೇ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಯಾವೆಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂಬುದರ ಕುರಿತು ವಿವರ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ಸೂಚಿಸಿದ ಪೀಠ, ವಿಚಾರಣೆಯನ್ನು ಮುಂದೂಡಿತು.

ABOUT THE AUTHOR

...view details