ಬೆಂಗಳೂರು: ಕೋವಿಡ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಸಂಬಂಧ ಜವಾಬ್ದಾರಿಯುತ ಹಿರಿಯ ಅಧಿಕಾರಿಯೊಬ್ಬರಿಂದ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.
ಕೊರೊನಾ ನಿಯಂತ್ರಣ ಸಂಬಂಧ ಸಲ್ಲಿಸಿರುವ ವಿವಿಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿ ಗಮನಿಸಿದ ಪೀಠ, ಕಾಯ್ದೆ ಉಲ್ಲಂಘಿಸಿದ ರಾಜಕೀಯ ರ್ಯಾಲಿಗಳು, ಪ್ರತಿಭಟನೆಗಳು ಹಾಗೂ ಬಂದ್ ನಡೆಸಿದವರ ವಿರುದ್ಧ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಅಲ್ಲದೇ, ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಅನ್ವಯ ಶಿಕ್ಷಾರ್ಹ ಅಪರಾಧ. ಹಾಗಿದ್ದೂ ಸರ್ಕಾರ ಕಾನೂನು ರೀತಿ ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿಲ್ಲ. ನಿಯಮ ಉಲ್ಲಂಘಿಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಹಿಂದಿನಿಂದಲೂ ಕೋರ್ಟ್ ಹೇಳುತ್ತಿದೆ. ಆದರೆ ಸರ್ಕಾರ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗುತ್ತಿದೆ ಎಂದಿತು.
ತಪ್ಪಿತಸ್ಥರ ವಿರುದ್ಧ ಕಾನೂನು ಜಾರಿ ಮಾಡುವ ಬದ್ಧತೆಯನ್ನು ಸರ್ಕಾರ ತೋರಿಸಬೇಕು. ಅದಕ್ಕಾಗಿ ಹಿರಿಯ ಹಾಗೂ ಜವಾಬ್ದಾರಿಯುತ ಅಧಿಕಾರಿಯೊಬ್ಬರಿಂದ ಪ್ರಮಾಣಪತ್ರವನ್ನು ಮುಂದಿನ ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿ, ವಿಚಾರಣೆಯನ್ನು ಜನವರಿ 25ಕ್ಕೆ ಮುಂದೂಡಿತು.