ಬೆಂಗಳೂರು: ಬಿಜೆಪಿಗೆ ಅಧಿಕೃತವಾಗಿ ಬಾಹ್ಯ ಬೆಂಬಲ ಘೋಷಣೆ ಮಾಡಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಅವರು ರಾಜ್ಯ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಕುಮಾರಪಾರ್ಕ್ನಲ್ಲಿರುವ ಯಡಿಯೂರಪ್ಪ ಅವರ ಅಧಿಕೃತ ನಿವಾಸ ಕಾವೇರಿಗೆ ಇಂದು ಸಂಜೆ ಸಂಸದೆ ಸುಮಲತಾ ಆಗಮಿಸಿದರು. ಬಿಎಸ್ವೈ ಜೊತೆ ಕೆಲಕಾಲ ರಾಜಕೀಯ ವಿಚಾರಗಳ ಕುರಿತು ಮಾತುಕತೆ ನಡೆಸಿದರು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆಗೆ ಯತ್ನಿಸುತ್ತಿರುವ ಸಮಯದಲ್ಲಿ ಬಿಜೆಪಿಗೆ ಬಹಿರಂಗವಾಗಿ ಬೆಂಬಲ ಘೋಷಣೆ ಮಾಡಿರುವುದರ ಹಿನ್ನೆಲೆಯಲ್ಲಿ ಮಹತ್ವದ ಮಾತುಕತೆ ನಡೆಸಲಾಯಿತು ಎನ್ನಲಾಗಿದೆ.
ಈ ಹಿಂದೆಯೂ ಯಡಿಯೂರಪ್ಪ ಜೊತೆ ಉತ್ತಮ ಒಡನಾಡ ಇರಿಸಿಕೊಂಡಿದ್ದ ಸುಮಲತಾ, ಮೈ ಶುಗರ್ ವಿಚಾರ ಸೇರಿದಂತೆ ಹತ್ತು ಹಲವು ವಿಷಯಗಳಲ್ಲಿ ಚರ್ಚಿಸುತ್ತಾ ಬಂದಿದ್ದರು. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲ ರೀತಿಯ ನೆರವವನ್ನು ಸುಮಲತಾ ಪಡೆದುಕೊಳ್ಳುತ್ತಲೇ ಬಂದಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಬಿಜೆಪಿ ತಮ್ಮ ಅಭ್ಯರ್ಥಿ ಹಾಕದೇ ಪಕ್ಷೇತರ ಅಭ್ಯರ್ಥಿಯಾಗಿ ನಿಂತಿದ್ದ ಸುಮಲತಾ ಅವರಿಗೆ ಬಹಿರಂಗವಾಗಿ ಬೆಂಬಲ ಕೊಟ್ಟಿತ್ತು. ನಂತರ ಗೆದ್ದ ಬಳಿಕ ಸುಮಲತಾ ಕೂಡ ಎಲ್ಲ ವಿಚಾರದಲ್ಲಿ ಬಿಜೆಪಿಗೆ ಬೆಂಬಲಿಸುತ್ತಲೇ ಬಂದಿದ್ದು, ಇದೀಗ ಬಹಿರಂಗವಾಗಿ ಅಧಿಕೃತವಾಗಿ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಹಿರಿಯ ನಾಯಕ ಯಡಿಯೂರಪ್ಪ ಅವರೊಂದಿಗೆ ರಾಜಕೀಯ ವಿಚಾರದ ಕುರಿತು ಸಮಾಲೋಚನೆ ನಡೆಸಿದರು. ಪಕ್ಷ ಬಲವರ್ಧನೆಗೆ ಸಹಕಾರ ನೀಡಿವ ಭರವಸೆ ನೀಡಿದರು ಎನ್ನಲಾಗಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸುತ್ತಿದ್ದು, ಇಂದೇ ಮಂಡ್ಯಕ್ಕೆ ಸುಮಲತಾ ತೆರಳುತ್ತಿದ್ದಾರೆ. ಅದಕ್ಕೂ ಮುನ್ನ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.