ಕರ್ನಾಟಕ

karnataka

ETV Bharat / state

ಕೊರೊನಾ ನಿಯಮ ಉಲ್ಲಂಘಿಸಿ ಐಟಿ ಇಲಾಖೆ ಎದುರು ಪ್ರತಿಭಟನೆ: ಕಾಂಗ್ರೆಸ್ ನಾಯಕರಿಗೆ ಸಮನ್ಸ್ - ಎಸಿಎಂಎಂ ನ್ಯಾಯಾಲಯ

ಕೊರೊನಾ ನಿಯಮ ಉಲ್ಲಂಘನೆ ಮಾಡಿ ಆದಾಯ ತೆರಿಗೆ ಇಲಾಖೆ ಎದುರು ಪ್ರತಿಭಟನೆ ನಡೆಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕರ ವಿರುದ್ಧ ನಗರದ 42ನೇ ಎಸಿಎಂಎಂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.

summons-to-congress-leaders-for-violating-corona-rules
ಕಾಂಗ್ರೆಸ್ ನಾಯಕರಿಗೆ ಸಮನ್ಸ್

By

Published : Jan 7, 2023, 9:08 PM IST

ಬೆಂಗಳೂರು: ಕೊರೊನಾ ನಡುವೆಯೂ ಸರ್ಕಾರ ವಿಧಿಸಿದ್ದ ನಿಯಮಗಳನ್ನು ಉಲ್ಲಂಘಿಸಿ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದ ಪ್ರಕರಣ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಸಮನ್ಸ್ ಜಾರಿ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಜನವರಿ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಪ್ರಕರಣ ಸಂಬಂಧ ಸತತ ನಾಲ್ಕು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ಪ್ರತಿವಾದಿಗಳಾದ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಸುಮಾರು 13 ಮಂದಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಲಾಗಿದೆ. ದೇಶದಾಧ್ಯಂತ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಇದನ್ನು ಖಂಡಿಸಿದ್ದ ಕೆಪಿಸಿಸಿ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದರು.

ಈ ಸಂಬಂಧ ಭಾಗಿಯಾಗಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ಸೇರಿದಂತೆ ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಕೊರೊನಾ ನಿಯಂತ್ರಣಕ್ಕೆ ವಿಧಿಸಿದ್ದ ನಿಯಮಗಳನ್ನು ಪಾಲಿಸಿರಲಿಲ್ಲ. ಅಲ್ಲದೆ, ಮಾಸ್ಕ್​ ಧರಿಸಿರಲಿಲ್ಲ. ಜೊತೆಗೆ, ಸಾಮಾಜಿಕ ಅಂತರವನ್ನೂ ಕಾಪಾಡದೆ ನಿಯಮಗಳನ್ನು ಉಲ್ಲಂಘಿಸಿದ್ದರು. ಇದರ ವಿರುದ್ಧ ಕೋವಿಡ್​​ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಯು.ಟಿ.ಖಾದರ್, ಪಿ.ಟಿ.ಪರಮೇಶ್ವರ ನಾಯಕ್, ಕಾಂಗ್ರೆಸ್ ಮುಖಂಡರಾದ ರಿಜ್ವಾನ್ ಹರ್ಷದ್, ಎನ್.ನಾರಾಯಣಸ್ವಾಮಿ, ಸಲೀಮ್ ಅಹ್ಮದ್, ಸೌಮ್ಯಾರೆಡ್ಡಿ, ಮಹಮ್ಮದ್ ನಲಪಾಡ್ ಹ್ಯಾರಿಸ್ ಅವರು ಪ್ರತಿವಾದಿಗಳಾಗಿದ್ದು, ಎಲ್ಲರಿಗೂ ಸಮನ್ಸ್ ಜಾರಿ ಮಾಡಲಾಗಿದೆ.

ಇದನ್ನೂ ಓದಿ:ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿಚ್ಛೇದನಕ್ಕೆ ಹೈಕೋರ್ಟ್ ಬ್ರೇಕ್

ABOUT THE AUTHOR

...view details