ಬೆಂಗಳೂರು :ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಆದೇಶಿಸಿದ್ದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
ಬಿಬಿಎಂಪಿ ಚುನಾವಣೆ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ - ಬಿಬಿಎಂಪಿ ಚುನಾವಣೆ ಕುರಿತ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ
14:40 December 18
ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ
ಇದನ್ನೂ ಓದಿ: ಬಾಲ ನ್ಯಾಯ ಮಂಡಳಿ ಆಯ್ಕೆ ಸಮಿತಿಗೆ ಅರ್ಹರಲ್ಲದವರ ನೇಮಕ ಆರೋಪ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಆದೇಶಿಸಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬೊಬ್ಡೆ ಹಾಗೂ ನ್ಯಾಯಮೂರ್ತಿಗಳಾದ ಬೋಪಣ್ಣ ಮತ್ತು ವಿ.ರಾಮಸುಬ್ರಮಣಿಯನ್ ಅವರಿದ್ದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ರಾಜ್ಯ ಚುನಾವಣಾ ಆಯೋಗ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು 2021ರ ಫೆಬ್ರವರಿ 5ಕ್ಕೆ ಮುಂದೂಡಿತು. ಇದೇ ವೇಳೆ, ಹೈಕೋರ್ಟ್ ನೀಡಿದ್ದ ತೀರ್ಪಿಗೆ ಮುಂದಿನ ಆದೇಶದವರೆಗೆ ತಡೆಯಾಜ್ಞೆ ನೀಡಿ ಆದೇಶಿಸಿತು.
ಇದನ್ನೂ ಓದಿ: ಬಿಬಿಎಂಪಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ಬಿಬಿಎಂಪಿ ಚುನಾವಣೆ ಬಗ್ಗೆ ಹೈಕೋರ್ಟ್ ತೀರ್ಪು:ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ಕಾಂಗ್ರೆಸ್ ಪಕ್ಷದ, ಬಿಬಿಎಂಪಿಯ ಮಾಜಿ ಸದಸ್ಯ ಎಂ.ಶಿವರಾಜು ಹಾಗೂ ರಾಜ್ಯ ಚುನಾವಣಾ ಆಯೋಗ ಪ್ರತ್ಯೇಕವಾಗಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಪಾಲಿಕೆಗೆ ಚುನಾವಣೆ ನಡೆಸಲು ಡಿ. 4 ರಂದು ಆದೇಶಿಸಿತ್ತು. ಹೈಕೋರ್ಟ್ ತನ್ನ ತೀರ್ಪಿನಲ್ಲಿ, ರಾಜ್ಯ ಸರ್ಕಾರ ಪಾಲಿಕೆಯನ್ನು ಈಗಿರುವ 198 ವಾರ್ಡ್ಗಳಿಂದ 243 ವಾರ್ಡ್ಗಳಿಗೆ ಹೆಚ್ಚಿಸಲು ಕೆಎಂಸಿ ಕಾಯ್ದೆಗೆ ತಿದ್ದುಪಡಿ ತಂದಿರುವ ಕ್ರಮ ಸರಿ ಇದೆಯಾದರೂ, ಅದು ಈ ಚುನಾವಣೆಗೆ ಅನ್ವಯಿಸುವುದಿಲ್ಲ. ಚುನಾವಣೆಗೆ ಸಿದ್ಧತೆಗಳನ್ನು ಆರಂಭಿಸಿದ ಬಳಿಕ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ. ಹೀಗಾಗಿ ಹೊಸ ಕಾಯ್ದೆಯು ಈ ಚುನಾವಣೆಗೆ ಅನ್ವಯಿಸುವುದಿಲ್ಲ ಹಾಗೂ ಅದರ ಆಧಾರದಲ್ಲಿ ಚುನಾವಣೆ ಮುಂದೂಡಲು ಬರುವುದಿಲ್ಲ. ಆದ್ದರಿಂದ ಪಾಲಿಕೆಗೆ ಸಂವಿಧಾನದ ವಿಧಿ 243 (ಯು) ಪ್ರಕಾರ ಚುನಾವಣೆ ನಡೆಸಬೇಕು ಎಂದು ತೀರ್ಪು ನೀಡಿತ್ತು.