ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಕ್ರಮ ಎಸಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವವನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಅಲ್ಲದೆ, ಲೋಕಸಭೆ ಅಧಿವೇಶನದಲ್ಲಿ ಭಾಗಿಯಾಗಬಹುದು ಎಂದು ತಿಳಿಸಿದೆ.
ತನ್ನನ್ನು ಅನರ್ಹಗೊಳಿಸಿ ಆದೇಶಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜತೆಗೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಅಡ್ಡಿಯಿಲ್ಲ ಎಂಬುದಾಗಿ ತಿಳಿಸಿದೆ ಎಂದು ಅರ್ಜಿದಾರರ ಪರ ವಕೀಲರ ತಂಡದ ವಕೀಲರಾದ ಎ ವಿ ನಿಶಾಂತ್ ಅವರು ಈಟಿವಿ ಭಾರತ್ಗೆ ಮಾಹಿತಿ ನೀಡಿದರು.
ಪ್ರಕರಣದ ಹಿನ್ನೆಲೆ: ಕಳೆದ ಲೋಕಸಭೆ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರು ನಾಮಪತ್ರ ಸಲ್ಲಿಸುವಾಗ ಪೂರ್ಣಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಬಿಜೆಪಿಯ ಪರಾಜಿತ ಅಭ್ಯರ್ಥಿ ಎ. ಮಂಜು ಹಾಗೂ ವಕೀಲ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜ. 17ರಂದು ಅರ್ಜಿಯನ್ನು ವಜಾಗೊಳಿಸಿತ್ತು. ʼಅರ್ಜಿ ದೋಷಪೂರಿತವಾಗಿದೆ. ಇದರಲ್ಲಿನ ಲೋಪಗಳನ್ನು ಸರಿಪಡಿಸಲು ಕಾಲಾವಕಾಶ ನೀಡಿದ ನಂತರವೂ ಕಾಲಮಿತಿಯಲ್ಲಿ ಅವುಗಳನ್ನು ಸರಿಪಡಿಸಿಲ್ಲʼ ಎಂದು ಹೇಳಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಮತ್ತೆ ಪ್ರಕರಣದ ವಿಚಾರಣೆ ನಡೆಸಲು ಅರ್ಜಿಯನ್ನು ಹೈಕೋರ್ಟ್ಗೆ ರವಾನಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ಪುರಸ್ಕರಿಸಿ, ಪ್ರಜ್ವಲ್ ರೇವಣ್ಣರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿತ್ತು.
ಈ ನಡುವೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸುವವರೆಗೂ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ :ಸಂಸದ ಸ್ಥಾನ ಅಸಿಂಧು ಆದೇಶಕ್ಕೆ ತಡೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ