ಬೆಂಗಳೂರು: ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಿರುವ ಬರ ಪರಿಹಾರ ಹಾಗೂ ಇತರೆ ಅನುದಾನಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸುರ್ಜೇವಾಲಾ "18,177.44 ಕೋಟಿ ರೂ. ಬರ ಪರಿಹಾರಕ್ಕಾಗಿ ಕರ್ನಾಟಕದಿಂದ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. 42 ಸಾವಿರ ಕೋಟಿ ರೂ. ಜಿಎಸ್ಟಿ ಪಾಲು ಸೇರಿ ಇತರ ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವತಃ ಪ್ರಧಾನಿ ಮೋದಿ ಅವರನ್ನು ಭೇಟಿಯಾದರೂ ಸ್ಪಂದನೆ ಇಲ್ಲ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ರಾಜ್ಯದಲ್ಲಿ 236ರಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಎಂದು ಗುರುತಿಸಲಾಗಿದೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ ಎಂದು ಅಧ್ಯಯನ ನಡೆಸಿ ವರದಿ ಮಾಡಲಾಗಿದೆ. ಬರದಿಂದ ಸಣ್ಣ ಹಾಗೂ ಅತಿ ಸಣ್ಣ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಎನ್.ಡಿ.ಆರ್.ಎಫ್ ನಿಯಮಾವಳಿಯಂತೆ 18,177.44 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದರಲ್ಲಿ 4663.12 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಅನುದಾನ, 363.68 ಕೋಟಿ ರೂ. ಜಾನುವಾರುಗಳ ರಕ್ಷಣೆಗೆ ಹಣ ಒದಗಿಸುವಂತೆ ಮನವಿ ಮಾಡಲಾಗಿದೆ. ಆದರೆ, ಕೇಂದ್ರ ಸರ್ಕಾರ ಮಾತ್ರ ಕಿವುಡಾಗಿದೆ ಎಂದು ಕಿಡಿ ಕಾರಿದ್ದಾರೆ.
"ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಶೀಘ್ರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಗೂ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಿದ್ದಾರೆ. ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದಾರೆ. ಇಷ್ಟಾದರೂ ಕೇಂದ್ರ ಇದುವರೆಗೂ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಇದು ಕೇಂದ್ರ ಸರ್ಕಾರ ನಡೆದುಕೊಳ್ಳುವ ರೀತಿಯೇ?" ಎಂದು ಸುರ್ಜೇವಾಲಾ ಕಟುವಾಗಿ ಪ್ರಶ್ನೆ ಮಾಡಿದ್ದಾರೆ.