ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ಒಂದು ತಿಂಗಳೊಳಗೆ ವರದಿ ಸಲ್ಲಿಸಬೇಕೆಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕಲ್ಲು ಕ್ವಾರಿಗಳಲ್ಲಿ ಸುರಕ್ಷತಾ ಕ್ರಮ ಪಾಲಿಸುತ್ತಿರುವ ಬಗ್ಗೆ ಸರ್ವೇ ನಡೆಸಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ - State High Court
ರಾಜ್ಯದಲ್ಲಿರುವ ಕಲ್ಲು ಕ್ವಾರಿಗಳಲ್ಲಿ ಸುರಕ್ಷತೆಗಾಗಿ ಯಾವೆಲ್ಲಾ ನಿಯಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಿಪ್ಪಗೊಂಡನಹಳ್ಳಿ ಜಲಾಶಯ, ಮಂಚನ ಬೆಲೆ ಜಲಾಶಯ ಹಾಗೂ ದೇವನಹಳ್ಳಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಹಾಗೂ ಕಲ್ಲು ಗಣಿಗಾರಿಕೆಗೆ ನೀಡಿರುವ ಪರವಾನಗಿ ರದ್ದುಪಡಿಸುವಂತೆ ಕೋರಿ ಸಮಾಜ ಪರಿವರ್ತನಾ ಸಮಿತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳು ಹೆಚ್ಚುತ್ತಿದ್ದು, ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ರಾಜ್ಯದಲ್ಲಿರುವ ಅಕ್ರಮ ಕಲ್ಲು ಕ್ವಾರಿಗಳ ಮಾಹಿತಿಯನ್ನು ಈ ಹಿಂದೆ ಸರ್ಕಾರವೇ ನೀಡಿದೆ. ಹೀಗಾಗಿ ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಅಲ್ಲಿ ಸುರಕ್ಷತಾ ನಿಯಮಗಳ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಂದೊಮ್ಮೆ ನಿಯಮಗಳನ್ನು ಪಾಲಿಸದಿರುವುದು ಕಂಡುಬಂದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಅಕ್ರಮ ಕಲ್ಲು ಗಣಿಗಾರಿಕೆ ಸಂಬಂಧ ಜನ ದೂರು ನೀಡಲು ಮತ್ತು ಅವುಗಳನ್ನು ಪರಿಶೀಲಿಸಲು ವ್ಯವಸ್ಥೆ ರೂಪಿಸುವಂತೆ ನ್ಯಾಯಾಲಯ ಡಿ. 12ರಂದು ನೀಡಿರುವ ನಿರ್ದೇಶನದ ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮಾ. 8ಕ್ಕೆ ಮುಂದೂಡಿದೆ.