ಬೆಂಗಳೂರು :ಡಿಜಿಟಲ್ ಕಲಿಕಾ ಯೋಜನೆಯಿಂದ ಉನ್ನತ ಶಿಕ್ಷಣದ ಚಿತ್ರಣ ಬದಲಾಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದ ಬ್ಯಾಂಕ್ವಿಟ್ ಹಾಲ್ನಲ್ಲಿ ಇಂದು ಆಯೋಜಿಸಿದ್ದ ಸ್ಮಾರ್ಟ್ ತರಗತಿಗಳ ಉದ್ಘಾಟನೆ ಹಾಗೂ ಟ್ಯಾಬ್ಲೆಟ್ ಪಿಸಿ ವಿತರಣಾ ಕಾರ್ಯಕ್ರಮಕ್ಕೆ (ಡಿಜಿಟಲ್ ಕಲಿಕಾ ಯೋಜನೆ) ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಲಿಕೆಯಿಂದ ವಂಚಿತರಾಗಬರಬಾರದೆಂದು ಈ ಯೋಜನೆ ಜಾರಿಗೆ ತರಲಾಗಿದೆ ಎಂದರು.
ಈ ಯೋಜನೆ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿಗೆ ಸಹಕಾರಿಯಾಗಲಿದೆ. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜು, 87 ಸರ್ಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಇದರ ಉಪಯೋಗವಾಗಲಿದೆ.
ಟ್ಯಾಬ್ಲೆಟ್ ಪಿಸಿ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ.. ಈ ಯೋಜನೆಗಾಗಿ 163 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೋವಿಡ್ ಸಂಕಷ್ಟದ ಹಿನ್ನೆಲೆ, ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವನ್ನು ಅಳಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥ್ ನಾರಾಯಣ ಮಾತನಾಡಿ, ಕೋವಿಡ್ ಸಂಕಷ್ಟದಲ್ಲೂ ವಿದ್ಯಾರ್ಥಿಗಳ ಕಲಿಕೆ ಮುಂದುವರೆಸಲು ಈ ಟ್ಯಾಬ್ಲೆಟ್ ಪಿಸಿಗಳನ್ನು ನೀಡಲಾಗುತ್ತಿದೆ. ಜತೆಗೆ ಎಲ್‌ಎಂಎಸ್ ವ್ಯವಸ್ಥೆಯಲ್ಲಿ ಕಲಿಕೆ ಮುಂದುವರಿಸಬಹುದು. ಸ್ಮಾರ್ಟ್ ತರಗತಿಗಳನ್ನು ಆರಂಭಿಸಲು ಚಾಲನೆ ನೀಡಲಾಗಿದೆ.
ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್ ಕ್ಲಾಸ್ ರೂಪಗಳಲ್ಲಿ ತರಗತಿ ಆರಂಭವಾಗಲಿದೆ. ಇನ್ನು, ಮುಂದಿನ ದಿನಗಳಲ್ಲಿ ಸುಮಾರು 6,500 ಸ್ಮಾರ್ಟ್ ಕ್ಲಾಸ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಶಿಕ್ಷಣದಲ್ಲಿ ಸುಧಾರಣೆ-ಉತ್ತಮ ರಾಜ್ಯ ನಿರ್ಮಾಣ :ಸರ್ಕಾರಿ ಕಾಲೇಜುಗಳಲ್ಲೂ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಇದರಿಂದ ಸಹಕಾರಿಯಾಗಲಿದೆ. ಶಿಕ್ಷಣದಲ್ಲಿ ಸುಧಾರಣೆ ತಂದರೆ ಉತ್ತಮ ರಾಜ್ಯ ಕಟ್ಟಲು ಸಾಧ್ಯ. ಇದಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಆವಿಷ್ಕಾರ ಹಾಗೂ ತಂತ್ರಜ್ಞಾನಕ್ಕೆ ಈ ಸ್ಮಾರ್ಟ್ ತರಗತಿಗಳು ಅವಶ್ಯಕ. ಹೀಗಾಗಿ, ಇದನ್ನು ಎಲ್ಲ ವಿದ್ಯಾರ್ಥಿಗಳು ಬಳಸಿಕೊಂಡು, ತಮ್ಮ ಭವಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದರು.
ಈ ವರ್ಷ ಬಜೆಟ್ನಿಂದ 2,500 ಸ್ಮಾರ್ಟ್ ಕ್ಲಾಸ್ಗಳಿಗೆ ಅನುಕೂಲ ಆಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020-21ರಿಂದ ಅನುಷ್ಠಾನ ಆಗಿದೆ. ಈ ವರ್ಷ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವಿತರಿಸಲಾಗಿದೆ. ನಮ್ಮ ಸರ್ಕಾರಿ ಕಾಲೇಜುಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡ್ತಿದ್ದಾರೆ. ಸರ್ಕಾರಿ ಕಾಲೇಜುಗಳು ಬೇರೆ ಕಾಲೇಜುಗಳಿಗೆ ಮಾದರಿಯಾಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.
ಪುನಃ ಕಾಲೇಜು ಆರಂಭಕ್ಕೆ ಸಿದ್ಧತೆ :ಕೋವಿಡ್ನಿಂದ ಸಾಕಷ್ಟು ಸಮಸ್ಯೆ ಆಗಿದೆ. ಕಾಲೇಜುಗಳು ಕೂಡ ಬಂದ್ ಆಗಿವೆ. ಈಗ ಸಿಎಂ ಅವರ ಒಪ್ಪಿಗೆಯಿಂದ ಪುನಃ ಕಾಲೇಜು ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮರಳಿ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕು. ಜುಲೈನಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಲು ಕ್ರಮವಹಿಸುತ್ತಿದ್ದೇವೆ. ಈ ಮೂಲಕ ಬೇಗ ಕಾಲೇಜು ಆರಂಭಿಸಿ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಕೊಡಲು ಕ್ರಮವಹಿಸುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಮುಂದಿನ ಸಿಎಂ ಸಿದ್ದರಾಮಯ್ಯ ಅಂತಾ ಘೋಷಿಸಿದ್ರೆ ಕಾಂಗ್ರೆಸ್ಗೆ 130 ರಿಂದ 150 ಸೀಟು ಪಕ್ಕಾ: ಅಖಂಡ ಭವಿಷ್ಯ
ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರನಾಯಕ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಸಮಾಜಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ನಾಗಲಾಂಬಿಕೆ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಾಂಕೇತಿಕವಾಗಿ ಕೆಲವು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ನೀಡಲಾಯಿತು.