ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಆರೋಪಿ ತಲೆಮರೆಸಿಕೊಂಡಿರುವ ಮಾಜಿ ಮೇಯರ್ ಸಂಪತ್ ರಾಜ್ ಬಂಧಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿದೆ.
ಸಂಪತ್ ರಾಜ್ ಬಂಧಿಸಲು ಎಲ್ಲಾ ಕ್ರಮ ಕೈಗೊಳ್ಳಿ: ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ - ಬೆಂಗಳೂರು ಗಲಭೆ ಪ್ರಕರಣ
ತಲೆಮರೆಸಿಕೊಂಡಿರುವ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಸಂಪತ್ ರಾಜ್ ಬಂಧನಕ್ಕೆ ಎಲ್ಲಾ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ.
ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆಗಿರುವ ನಷ್ಟ ಅಂದಾಜು ಮಾಡಿ ಹೊಣೆಗಾರಿಕೆ ನಿಗದಿಪಡಿಸಲು ಹಾಗೂ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲು ಕೋರಿ ಸಲ್ಲಿಸಿದ್ದ 4 ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ತಲೆಮರೆಸಿಕೊಂಡಿರುವ ವಿಚಾರವನ್ನು ಸರ್ಕಾರಿ ವಕೀಲರು ಪೀಠದ ಗಮನಕ್ಕೆ ತಂದರು. ಹಾಗೆಯೇ ವಿಚಾರಣಾ ನ್ಯಾಯಾಲಯ ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿರುವುದನ್ನು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ಆರೋಪಿ ಸಂಪತ್ ರಾಜ್ನನ್ನು ಪತ್ತೆ ಹಚ್ಚಿ ಬಂಧಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಜರುಗಿಸುವಂತೆ ಪೊಲೀಸರಿಗೆ ನಿರ್ದೇಶಿಸಿತು. ಅಲ್ಲದೆ ಮುಂದಿನ ವಿಚಾರಣೆ ವೇಳೆ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಿತು.
ಇದೇ ವೇಳೆ ಕ್ಲೇಮು ಕಮಿಷನರ್ಗೆ ನೀಡಿರುವ ಸವಲತ್ತುಗಳ ಕುರಿತು ಮಾಹಿತಿ ಪಡೆದುಕೊಂಡ ಪೀಠ, ಕ್ಲೇಮು ಕಮಿಷನರ್ಗೆ ಅಗತ್ಯವಿರುವ ಕಾರು ಹಾಗೂ ಟೈಪಿಸ್ಟ್ಅನ್ನು ಕೂಡಲೇ ಒದಗಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆ ಮುಂದೂಡಿತು.