ಕರ್ನಾಟಕ

karnataka

ETV Bharat / state

ಒತ್ತುವರಿ ತೆರವು ಕಾರ್ಯಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ : ಹೈಕೋರ್ಟ್ - ಬಿಬಿಎಂಪಿ ಕಾಯಿದೆಯಡಿ ಪ್ರತ್ಯೇಕ ಅಧಿಕಾರಿ ನೇಮಕ

ಕೆರೆ ಹಾಗೂ ರಾಜಕಾಲುವೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಹಲವು ಸಂಘಟನೆಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಗಳ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಹಾಗೂ ನ್ಯಾಯಮೂರ್ತಿ ಎಂ.ಜಿ.ಎಸ್​ ಕಮಲ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದೆ.

ಹೈಕೋರ್ಟ್
ಹೈಕೋರ್ಟ್

By

Published : Aug 1, 2023, 9:07 PM IST

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಕೆರೆ ಮತ್ತು ರಾಜಕಾಲುವೆಗಳ ಒತ್ತುವರಿಗೆ ಸಂಬಂಧಿಸಿದಂತೆ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಹೊರಡಿಸಿರುವ ಅಧಿಸೂಚನೆಯಂತೆ ತಕ್ಷಣ ಅಧಿಕಾರಿಗಳನ್ನು ನೇಮಕ ಮಾಡಿ ಜವಾಬ್ದಾರಿಗಳನ್ನು ನಿಗದಿ ಪಡಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ಈ ಅಧಿಕಾರಿಗಳು ಒತ್ತುವರಿಯಾಗಿರುವ ಜಮೀನುಗಳನ್ನು ಗುರುತಿಸಿ, ತಪ್ಪಿತಸ್ಥರ ವಿರುದ್ಧ ದೂರು ದಾಖಲಿಸುವುದರ ಜತೆಗೆ ಭೂ ಕಬಳಿಕೆಯ ಬಗ್ಗೆ ನ್ಯಾಯಾಲಯದಲ್ಲಿ ದೂರು ದಾಖಲಿಸಬೇಕು ಎಂದು ನಿರ್ದೇಶನ ನೀಡಿದೆ.

ಸಿಟಿಜನ್ ಆ್ಯಕ್ಷನ್ ಫೋರಂ ಸೇರಿದಂತೆ ಹಲವು ಸಂಘಟನೆಗಳು ಕೆರೆ ಹಾಗೂ ರಾಜಕಾಲುವೆ ಒತ್ತುವರಿ ತೆರವಿನ ಕುರಿತು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿದೆ.

ಅಲ್ಲದೆ, ಒತ್ತುವರಿಗಳನ್ನು ಗುರುತಿಸಿದ ಬಳಿಕ ಒತ್ತುವರಿದಾರರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು. ಈ ಕಾರ್ಯದಲ್ಲಿ ವಿಳಂಬ ಮಾಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಬೇಕು ಎಂದು ಬಿಬಿಎಂಪಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

ನಾಲ್ಕು ವಾರಗಳಲ್ಲಿ ಕ್ರಿಯಾ ಯೋಜನೆ ಸಲ್ಲಿಸಬೇಕು: ವಿಚಾರಣೆ ವೇಳೆ ನ್ಯಾಯಾಲಯದ ನಿರ್ದೇಶನದಂತೆ ಕೆರೆ, ರಾಜಕಾಲುವೆಗಳ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಮತ್ತು ಬಿಬಿಎಂಪಿ ವಿರುದ್ಧ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ನಗರಾಭಿವೃದ್ಧಿ ಇಲಾಖೆ, ಬಿಬಿಎಂಪಿ, ಬೆಂಗಳೂರು ಜಲಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ಎಲ್ಲ ಪ್ರಾಧಿಕಾರಗಳು ಸಮಾಲೋಚನೆ ನಡೆಸಿ ನಾಲ್ಕು ವಾರಗಳಲ್ಲಿ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.

ವಿಚಾರಣೆ ವೇಳೆ ನ್ಯಾಯಾಲಯದ ನಿರ್ದೇಶನದಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ನಗರಾಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಖುದ್ದು ಹಾಜರಾಗಿದ್ದರು. ಅಲ್ಲದೆ, ಬಿಬಿಎಂಪಿ ಪರ ವಕೀಲರು, ಪಾಲಿಕೆ ಮುಖ್ಯ ಆಯುಕ್ತರ ಪರವಾಗಿ ನೀಡಿದ ವರದಿ ಆಧರಿಸಿ ಬಿಬಿಎಂಪಿ ಒತ್ತುವರಿಗಳ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆೆ ಪ್ರಮಾಣಪತ್ರ ಸಲ್ಲಿಸಿದರು. ಈ ವರದಿ ಪರಿಶೀಲಿಸಿದ ನ್ಯಾಯಪೀಠ ಒತ್ತುವರಿ ತೆರವಿಗೆ ಕ್ರಮ ಕೈಗೊಂಡ ವರದಿ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಈ ಸಂಬಂಧ ಸಂಪೂರ್ಣ ಪ್ರಮಾಣ ಪತ್ರವನ್ನು ಪರಿಶೀಲನೆ ನಡೆಸಿದ ನ್ಯಾಯಪೀಠ, ಕೆಲವು ಅಂಶಗಳನ್ನು ಪರಿಶೀಲಿಸಿ, ಪ್ರಸ್ತುತ ಒತ್ತುವರಿದಾರರ ವಿರುದ್ಧ ಸಾಕಷ್ಟು ದಾಖಲೆಗಳು ಹಾಗೂ ಮಾಹಿತಿ ಇದೆ. ಈಗ ಬೇಕಾಗಿರುವುದು ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದು ಮಾತ್ರ. ಅದನ್ನು ಮುಲಾಜಿಲ್ಲದೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತು.

ಬಿಬಿಎಂಪಿ ಕಾಯಿದೆಯಡಿ ಪ್ರತ್ಯೇಕ ಅಧಿಕಾರಿ ನೇಮಕ: ಅಲ್ಲದೆ, ಒತ್ತುವರಿಯ ದೂರುಗಳಿದ್ದರೂ ನಿರ್ಲಕ್ಷಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವಿಭಾಗೀಯ ಪೀಠ ತಾಕೀತು ಮಾಡಿತು. ಅದರಂತೆ ಒತ್ತುವರಿ ತಡೆಗೆಂದೇ ಕೆರೆ ಸಂರಕ್ಷಣಾ ಕಾಯಿದೆ ಮತ್ತು ಬಿಬಿಎಂಪಿ ಕಾಯಿದೆಯಡಿ ಪ್ರತ್ಯೇಕ ಅಧಿಕಾರಿ ನೇಮಕ ಮಾಡಬೇಕು ಎಂದು ಸೂಚಿಸಿತು.

ಕಳೆದ ಜು. 22ರಂದು ನಗರದಲ್ಲಿ ರಾಜಕಾಲುವೆ ಒತ್ತುವರಿ ತೆರವು ಸಂಬಂಧ ಸಮಗ್ರ ಕ್ರಿಯಾ ಯೋಜನೆ ಸಲ್ಲಿಸಲು ನೀಡಿದ್ದ ನಿರ್ದೇಶನ ಪಾಲಿಸದ ಬಿಬಿಎಂಪಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಆಗ ಪಾಲಿಕೆ ಸಲ್ಲಿಸಿದ್ದ ಪ್ರಮಾಣಪತ್ರದಲ್ಲಿ ಪಾಲಿಕೆ ಒಟ್ಟು 2951 ಒತ್ತುವರಿ ಗುರುತಿಸಿದ್ದು, ಈವರೆಗೆ(18 ಜು.2023ರವರೆಗೆ) 2183 ತೆರವುಗೊಳಿಸಲಾಗಿದೆ. ಇನ್ನು 768 ತೆರವುಗೊಳಿಸಲು ಬಾಕಿ ಇದೆ ಎಂದು ಹೇಳಿತ್ತು.

ಇದನ್ನೂ ಓದಿ:ನಾಡಗೀತೆ ವಿಚಾರ: ಸಂಗೀತ ತಜ್ಞರು ನ್ಯಾಯಾಲಯಕ್ಕೆ ನೆರವಾಗುವಂತೆ ಹೈಕೋರ್ಟ್ ಸೂಚನೆ

ABOUT THE AUTHOR

...view details