ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೋವಿಡ್ 3ನೇ ಅಲೆಗೆ ಸಂಬಂಧಿಸಿದ ಪೂರ್ವ ಸಿದ್ಧತೆ ಕುರಿತಂತೆ ರಚಿಸಲಾಗಿರುವ ಡಾ. ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಕಾರ್ಯಪಡೆಯೊಂದಿಗೆ ಸಭೆ ನಡೆಸಿ, ಚರ್ಚಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಕೋವಿಡ್ 3ನೇ ಅಲೆಯನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳು, ಕಲ್ಪಿಸಬೇಕಾದ ಮೂಲಸೌಕರ್ಯ ಹಾಗೂ ಚಿಕಿತ್ಸಾ ಸೌಲಭ್ಯಗಳು, ಅಗತ್ಯವಿರುವ ಮಾನವ ಸಂಪನ್ಮೂಲ, ಔಷಧಗಳು ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು.
ಒಂದು ವಾರದೊಳಗೆ ಕಾರ್ಯಪಡೆಯು ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಡಾ. ದೇವಿ ಪ್ರಸಾದ್ ಶೆಟ್ಟಿ ಸಭೆಗೆ ತಿಳಿಸಿದ್ದು, ಕಾರ್ಯಪಡೆಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಆರೋಗ್ಯ ಸಚಿವ ಡಾ. ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಮತ್ತು ಇತರ ಅಧಿಕಾರಿಗಳು ಭಾಗವಹಿಸಿದ್ದರು.