ಬೆಂಗಳೂರು: ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ನಿಮಿತ್ತ ನಾಳೆ ವಿಧಾನಸೌಧದಲ್ಲಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ, ನ್ಯಾಕ್ ಪುರಸ್ಕೃತ ಕಾಲೇಜುಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜನೆ ಮಾಡಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಿಸಲಿದ್ದು, ಶಿಕ್ಷಕ ವೃಂದದಿಂದ ನಾಡಗೀತೆ ಹಾಗೂ ರೈತಗೀತೆಯನ್ನು ಹಾಡುವ ಕಾರ್ಯಕ್ರಮ ಆರಂಭವಾಗಲಿದೆ.
ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ನಂತರ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ ಪ್ರಾಸ್ತಾವಿಕವಾಗಿ ಭಾಷಣ ಮಾಡಲಿದ್ದಾರೆ. ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರೆ ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರದಾನಿಸಲಿದ್ದಾರೆ. ನ್ಯಾಕ್ ಪುರಸ್ಕೃತ ಕಾಲೇಜುಗಳಿಗೆ ಉನ್ನತ ಶಿಕ್ಷಣ ಸಚಿವ ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.