ಬೆಂಗಳೂರು :ಕೋವಿಡ್-19 ಹಿನ್ನೆಲೆ 2019-20ರ ಶೈಕ್ಷಣಿಕ ಸಾಲಿನ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸ್ಗಳ ಮಧ್ಯಂತರ ಸೆಮಿಸ್ಟರ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲು ಹೊರಡಿಸಿರುವ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಈ ಸಂಬಂಧ 2020ರ ಜುಲೈ 10ರಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ, ನಗರದ ಎಸ್ ಪಿ ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ವಿ ನಾಗರತ್ನ ಮತ್ತು ನ್ಯಾಯಮೂರ್ತಿ ರವಿ ವಿ ಹೊಸಮನಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಹೈಕೋರ್ಟ್ ತನ್ನ ತೀರ್ಪಿನಲ್ಲಿ, ವಿಶ್ವವಿದ್ಯಾಲಯ ಧನಸಹಾಯ ಆಯೋಗ(ಯುಜಿಸಿ) ಹೊರಡಿಸಿದ ಮಾರ್ಗಸೂಚಿ ಆಧರಿಸಿ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಮಧ್ಯಂತರ ಸೆಮಿಸ್ಟರ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ ಮತ್ತು ಹಿಂದಿನ ಸೆಮಿಸ್ಟರ್ ಅಂಕಗಳ (50:50) ಆಧಾರದ ಮೇಲೆ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲು ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದೆ.