ಬೆಂಗಳೂರು: ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.
ಈ ಕುರಿತು ಬೆಂಗಳೂರಿನ ಸುಧಾ ಕಟ್ವಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಮುಖ್ಯ ನ್ಯಾಯಮೂರ್ತಿಗಳಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಸಾರ್ವಜನಿಕರು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಕೆಲವೊಮ್ಮೆ ಪೊಲೀಸರು ದೂರು ಸ್ವೀಕರಿಸುವುದಿಲ್ಲ. ದೂರು ನೀಡಲು ಹೋದ ವ್ಯಕ್ತಿಗಳಿಗೆ ಗೌರವ ಕೊಡುವುದಿಲ್ಲ. ತಕ್ಷಣ ಕ್ರಮ ಕೈಗೊಳ್ಳುವುದಿಲ್ಲ. ಇಂತಹ ವೇಳೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದಲ್ಲಿ ದೂರು ದಾಖಲಿಸಬಹುದು.
ಸರ್ಕಾರ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಮಾಡಿಲ್ಲ. ಸರಿಯಾದ ಮೂಲಭೂತ ಸೌಲಭ್ಯ ಒದಗಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.