ಬೆಂಗಳೂರು: ರಾಜ್ಯದಲ್ಲಿನ ಬರ, ಪ್ರವಾಹ ಪರಿಸ್ಥಿತಿ ಹಾಗೂ ಇತರ ನೈಸರ್ಗಿಕ ವಿಪತ್ತುಗಳಿಂದ ಸಂಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಕಂದಾಯ ಸಚಿವ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.
ನಾಳೆ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ನೆರೆ ಸಂಕಷ್ಟ ಕುರಿತು ಚರ್ಚೆ: ಸಚಿವ ಆರ್. ಅಶೋಕ್ - ಬೆಂಗಳೂರು
ರಾಜ್ಯದಲ್ಲಿನ ಬರ, ಪ್ರವಾಹ ಪರಿಸ್ಥಿತಿ ಹಾಗೂ ಇತರ ನೈಸರ್ಗಿಕ ವಿಪತ್ತುಗಳಿಂದ ಸಂಭವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ಕಂದಾಯ ಸಚಿವ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸುದ್ದಿಗಾರರ ಜೊತೆ ಈ ಕುರಿತು ಮಾತನಾಡಿದ ಅವರು, ನಾಳೆ ಈ ಬಗ್ಗೆ ಸಭೆ ನಡೆಸುತ್ತೇವೆ ಎಂದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು, ವಸತಿ ಸಚಿವ ವಿ.ಸೋಮಣ್ಣ, ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಸಚಿವರಾದ ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಅವರು ಈ ಸಮಿತಿಯ ಸದಸ್ಯರಾಗಿರುತ್ತಾರೆ. ಅವರೆಲ್ಲರನ್ನು ಈ ಸಭೆಗೆ ಕರೆಯಲಾಗಿದೆ ಎಂದರು.
ಪ್ರವಾಹದಿಂದ ಉಂಟಾಗಿರುವ ನಷ್ಟದ ಬಗ್ಗೆ ಕೇಂದ್ರದ ಅಧ್ಯಯನ ತಂಡಕ್ಕೆ ಮನವರಿಕೆ ಮಾಡಲಾಗಿದೆ. ಅಂತಿಮ ಹಂತದ ವರದಿಯನ್ನು ಸಿದ್ದಪಡಿಸಬೇಕಿರುವುದರಿಂದ ನಾಳೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದ್ದು, ಹಾಳಾಗಿರುವ ರಸ್ತೆ, ಸೇತುವೆಗಳು ಸೇರಿದಂತೆ ನಷ್ಟದ ಬಗ್ಗೆ ಅಂತಿಮ ವರದಿಯನ್ನು ನೀಡಲಾಗುವುದು ಎಂದು ಹೇಳಿದರು.