ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಕೋವಿಡ್ ಬಂದ ಕಾರಣ ಸಾರಿಗೆ ಇಲಾಖೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ನೌಕರರಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ಬಂದಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಇಂದು ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಹೆಚ್.ಡಿ.ರೇವಣ್ಣ ಪರವಾಗಿ ಎ.ಟಿ.ರಾಮಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಾರಿಗೆ ಸಂಸ್ಥೆಯ 4 ನಿಗಮಗಳು ನಷ್ಟದಲ್ಲಿವೆ. ಸದ್ಯಕ್ಕೆ ನಮಗೆ ಬರುತ್ತಿರುವ ಆದಾಯದಲ್ಲಿ ವಾಹನಗಳಿಗೆ ಇಂಧನ ಭರ್ತಿ ಮಾಡಿಕೊಳ್ಳಬಹುದೇ ಹೊರತು ನೌಕರರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ಇಲಾಖೆಯ ದುಸ್ಥಿತಿಯನ್ನು ಬಿಚ್ಚಿಟ್ಟರು.