ಬೆಂಗಳೂರು:ಜೂನ್ 30ರಂದು ರಾಜ್ಯದ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಸ್ಥಾನದ ಅವಧಿ ಮುಕ್ತಾಯಗೊಳ್ಳಲಿದೆ. ಹೀಗಾಗಿ ಸದ್ಯದಲ್ಲೇ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ಪಶ್ಚಿಮ ಪದವೀಧರ ಕ್ಷೇತ್ರ, ಚಿತ್ರದುರ್ಗ, ದಾವಣಗೆರೆ, ತುಮಕೂರು,ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನೊಳಗೊಂಡ ಆಗ್ನೇಯ ಪದವೀಧರ ಕ್ಷೇತ್ರ, ಬೀದರ್, ಕಲಬುರಗಿ, ಯಾದಗಿರಿ,ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳನ್ನು ಒಳಗೊಂಡ ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು,ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳನ್ನು ಒಳಗೊಂಡ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅವಧಿ ಜೂನ್ 30ಕ್ಕೆ ಮುಕ್ತಾಯವಾಗಲಿದೆ. ಈ ಕ್ಷೇತ್ರಗಳ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಸದ್ಯದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಿದೆ. ಈ ಹಿನ್ನಲೆಯಲ್ಲಿಅರ್ಹರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ಕರೆ ನೀಡಿದರು.
ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಸುದ್ಧಿಗೋಷ್ಟಿ ಹೆಸರು ನೋಂದಣಿಗೆ ಜೂನ್ ವರೆಗೂ ಸಮಯವಿದೆ ಎಂದು ಕಾಯದೇ ಈಗಲೇ ಅರ್ಜಿ ಸಲ್ಲಿಸಿ, ಏಳು ದಿನ ಅರ್ಜಿ ಪರಿಶೀಲನೆಗೆ ಸಮಯ ಬೇಕಾಗಲಿದೆ. ಹಾಗಾಗಿ ಕಡೆಯ ದಿನಕ್ಕೆ ಕಾಯದೇ ಈಗಲೇ ಅರ್ಜಿ ಸಲ್ಲಿಸಿ ಎಂದು ಮತದಾರರಿಗೆ ಮನವಿ ಮಾಡಿದರು.
ಪದವೀಧರರ ಕ್ಷೇತ್ರದ ಚುನಾವಣಾ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಯಾವುದೇ ಪದವಿಯ ಫಲಿತಾಂಶ ಪ್ರಕಟಗೊಂಡು ಮೂರು ವರ್ಷ ಆಗಿರುವವರು ಪ್ರೌಢಶಾಲೆ ಅಥವಾ ಸಮಾನಾರ್ಥಕ ಶಿಕ್ಷಣದಲ್ಲಿ ಕಳೆದ ಆರು ವರ್ಷಗಳಲ್ಲಿ ಮೂರು ವರ್ಷ ಸೇವೆ ಸಲ್ಲಿಸಿದವರು ಮತದಾರರಾಗಲು ಅರ್ಹರಾಗಿರುತ್ತಾರೆ. ಅಂತವರು, ಪದವಿ ಪ್ರಮಾಣಪತ್ರ, ಶಿಕ್ಷಕರ ಪ್ರಮಾಣಪತ್ರ ಹಾಗೂ ನಿವಾಸಿ ದೃಢೀಕರಣ ಪತ್ರ ನೀಡಿ ಹೆಸರು ನೋಂದಣಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು.
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಬೆಳಗಾವಿ ಪ್ರಾದೇಶಿಕ ಆಯುಕ್ತರು, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಬೆಂಗಳೂರು ಪ್ರಾದೇಶಿಕ ಆಯುಕ್ತರು, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಕಲಬುರಗಿ ಪ್ರಾದೇಶಿಕ ಆಯುಕ್ತರು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರಲಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದು, ಅವರನ್ನು ಸಂಪರ್ಕಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತರು ಹೇಳಿದರು.