ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್(ಪಿಎಸ್‌ಐ) ನೇಮಕ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಅನುಮತಿ ನೀಡಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲು ಅನುಮತಿ ಕೋರಿ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಇಡಿ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಿದೆ.
ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪೊಲೀಸ್ ನೇಮಕಾತಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಡಿ ಹರ್ಷ ವಿರುದ್ಧ ತನಿಖೆ ನಡೆಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಹರ್ಷ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಈ ಸೂಚನೆ ನೀಡಿದೆ.
ಅಲ್ಲದೆ, ಆರೋಪಿಗಳ ವಿರುದ್ಧ ವಿಚಾರಣೆ ನಡೆಸಲು ಅನುಮತಿ ನೀಡಲು ಮ್ಯಾಜಿಸ್ಟ್ರೇಷನ್ ನ್ಯಾಯಾಲಯಕ್ಕೆ ಅಧಿಕಾರವಿಲ್ಲ. ಆದರೆ, ವಿಶೇಷ ನ್ಯಾಯಾಲಯ ಅಥವಾ ಸೆಷನ್ಸ್ ನ್ಯಾಯಾಲಯ ಮಾತ್ರ ಅನುಮತಿ ನೀಡಬಹುದಾಗಿದೆ. ಹೀಗಾಗಿ, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಗಳ ವಿಚಾರಣೆಗೆ ಅನುಮತಿ ಕೋರಿ ವಿಶೇಷ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ಆದೇಶದಲ್ಲಿ ತಿಳಿಸಿದೆ.