ಬೆಂಗಳೂರು: ಗಾಣಿಗ ಜನಾಂಗದ ಗುರುಪೀಠಕ್ಕೆ ನೀಡಿದ 5 ಕೋಟಿ ರೂಪಾಯಿ ಅನುದಾನ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ಗೆ 8 ಎಕರೆ ಜಮೀನು ಮಂಜೂರು ಮಾಡಿದ್ದ ಕ್ರಮ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸ್ವಯಂಪ್ರೇರಿತ (ಸುಮೋಟೋ) ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತನೆ ಮಾಡಿಕೊಂಡಿರುವ ಹೈಕೋರ್ಟ್, ವಕೀಲರಾದ ವಿದ್ಯುಲ್ಲತ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ (ನ್ಯಾಯಾಲಯಕ್ಕೆ ನೆರವಾಗುವವರು) ನೇಮಕ ಮಾಡಿ ಆದೇಶಿಸಿದೆ.
ಎನ್. ಹನುಮೇಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ, ಅರ್ಜಿಗೆ ಸಂಬಂಧಿಸಿದಂತೆ ಎಲ್ಲ ದಾಖಲೆಗಳನ್ನು ಮುಂದಿನ ಎರಡು ವಾರಗಳಲ್ಲಿ ವಿದ್ಯುಲ್ಲತ ಅವರಿಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದೆ.
ವಿಚಾರಣೆ ವೇಳೆ ಅರ್ಜಿದಾರರಾದ ಹನುಮೇಗೌಡ ಅವರಿಗೆ ಈ ಹಿಂದೆ ವಿಧಿಸಿರುವ ದಂಡವನ್ನು ಚೆಕ್ ಮೂಲಕ ಪಾವತಿಸಿರುವುದಾಗಿ ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಈ ಆದೇಶ ನೀಡಿದೆ.
ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬೆಂಗಳೂರು ನಗರ ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಅಪರಾಧ ತನಿಖಾ ವಿಭಾಗದ ಡಿಎಸ್‌ಪಿ, ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ ಅಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿಗೆ ನೋಟಿಸ್ ಜಾರಿಮಾಡಿತ್ತು.