ಬೆಂಗಳೂರು:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ಡಿ.19ರಂದು ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಪೊಲೀಸರನ್ನು ಕೊಲ್ಲಲು ಸಂಚು ರೂಪಿಸಿದ್ದ ಆರೋಪದಡಿ ಬಂಧಿತರಾಗಿದ್ದ ಐವತ್ತಕ್ಕೂ ಹೆಚ್ಚು ಜನರಲ್ಲಿ ಈಗಾಗಲೇ 21 ಮಂದಿಗೆ ಕಳೆದ ಫೆ.17 ರಂದು ಜಾಮೀನು ನೀಡಿದ್ದ ಹೈಕೋರ್ಟ್, ಗುರುವಾರ ಮತ್ತೆ 16 ಮಂದಿ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ಜಾಮೀನು ಕೋರಿ ಮೊಹಮ್ಮದ್ ಸುಹೇಲ್ ಸೇರಿದಂತೆ 16 ಮಂದಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲ ಲತೀಫ್, ತನಿಖಾಧಿಕಾರಿಗಳು ಸಂಗ್ರಹಿಸಿರುವ ದಾಖಲೆಗಳಲ್ಲಿ ಅರ್ಜಿದಾರರ ವಿರುದ್ಧದ ಆರೋಪಗಳಿಗೆ ನಿರ್ದಿಷ್ಟ ಸಾಕ್ಷ್ಯವಿಲ್ಲ ಎಂದು ಘಟನೆ ಕುರಿತು ವಿವರಿಸಿದರು. ವಾದ ಮಾನ್ಯ ಮಾಡಿದ ಪೀಠ, ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.