ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಡೆಸಿರುವ ಮರಗಳ ಗಣತಿಯ ವಿವರಗಳನ್ನು ಪಾಲಿಕೆಯ ವೆಬ್ಸೈಟ್ನಲ್ಲಿ ಪ್ರಕಟಿಸುವಂತೆ ಹೈಕೋರ್ಟ್ ಇಂದು ಆದೇಶಿಸಿದೆ.
ಅಭಿವೃದ್ಧಿ ಕಾಮಗಾರಿಗಳಿಗಾಗಿ ನಗರದಲ್ಲಿರುವ ಮರಗಳನ್ನು ಬಲಿಕೊಡಲಾಗುತ್ತಿದೆ ಎಂದು ಆಕ್ಷೇಪಿಸಿ ಬೆಂಗಳೂರು ನಿವಾಸಿ ದತ್ತಾತ್ರೇಯ ಟಿ. ದೇವರೆ ಮತ್ತು ಬೆಂಗಳೂರು ಎನ್ವಿರಾನ್ಮೆಂಟ್ ಟ್ರಸ್ಟ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಮರ ಪ್ರಾಧಿಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಹೈಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಇರುವ ಮರಗಳ ಗಣತಿ ನಡೆಸಿದ್ದೇವೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ ಮರಗಣತಿ ಪೂರ್ಣಗೊಂಡಿದ್ದರೆ, ಅದರ ವಿವರಗಳನ್ನು ಪಾಲಿಕೆಯ ವೆಬ್ಸೈಟ್ನಲ್ಲಿ ಪ್ರಕಟಿಸಿ ಎಂದು ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
ಹೈಕೋರ್ಟ್ ನಿರ್ದೇಶನದ ಹಿನ್ನೆಲೆ 43 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಮರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ ಮರಗಳ ಗಣತಿಯನ್ನು ನಡೆಸಿದೆ. ಈ ಕಾರ್ಯಕ್ಕೆ ಬಿಬಿಎಂಪಿ ಮರ ವಿಜ್ಞಾನ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿತ್ತು.