ಬೆಂಗಳೂರು:ಶಿವಮೊಗ್ಗ ಜಿಲ್ಲೆಯ ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸರ್ವೆ ನಂಬರ್ 78ರಲ್ಲಿ 89 ಎಕರೆ 31 ಗುಂಟೆ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗೆ ಮಂಜೂರು ಮಾಡಿ 2017ರ ಜ. 16ರಂದು ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಈ ಕುರಿತು ಪಿ.ಮಂಜಪ್ಪ ಮತ್ತಿತರ ಸ್ಥಳೀಯ ಗ್ರಾಮಸ್ಥರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ. ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗೆ ಮಂಜೂರು ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಮೇಲಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸುವಾಗ ಕಾನೂನು ಅಂಶಗಳನ್ನು ಪರಿಗಣಿಸಿಲ್ಲ ಎಂದು ಅಭಿಪ್ರಾಯಪಟ್ಟು, ಜಿಲ್ಲಾಧಿಕಾರಿ ಆದೇಶವನ್ನು ರದ್ದುಪಡಿಸಿ ಆದೇಶಿಸಿದೆ.