ಬೆಂಗಳೂರು :ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಹಾಸನದ ಅರಕಲಗೂಡು ತಾಲೂಕು ಪಂಚಾಯಿತಿ ಮಾಜಿ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರ ವಿರುದ್ಧದ ಪ್ರಕರಣಗಳನ್ನು ವಿಚಾರಣೆಗೆ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದು ಪಡಿಸಿರುವ ಹೈಕೋರ್ಟ್, ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ತನಿಖಾ ಸಂಸ್ಥೆ ಸಲ್ಲಿಸುವ ಮನವಿಗೆ ಸಕ್ಷಮ ಪ್ರಾಧಿಕಾರ ಆರು ತಿಂಗಳಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಅದು ಭ್ರಷ್ಟಾಚಾರ ಪ್ರಕರಣವಾದರೂ ರದ್ದುಪಡಿಸಬೇಕಾಗುತ್ತದೆ ಎಂದು ತಿಳಿಸಿದೆ.
ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ತಮ್ಮ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದ ಕ್ರಮವನ್ನು ಪ್ರಶ್ನಿಸಿ ಅರಕಲಗೋಡಿನ ತಾಲೂಕು ಪಂಚಾಯತ್ನ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ಫನೀಶ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿಂದ ನ್ಯಾಯಪೀಠ ಈ ಆದೇಶ ಮಾಡಿದೆ.
ಜೊತೆಗೆ, ಈ ರೀತಿಯ ಪ್ರಕರಣಗಳಲ್ಲಿ ಅನುಮತಿ ಕೋರಿ ತನಿಖಾಧಿಕಾರಿಗಳು ಸಲ್ಲಿಸುವ ಮನವಿಯನ್ನು ಆರು ತಿಂಗಳಲ್ಲಿ ಪರಿಗಣಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಯಾಗಿದ್ದ ಅರ್ಜಿದಾರರ ವಿರುದ್ಧ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೆ ಕಾಗ್ನಿಜಬಲ್ ಪಡೆದುಕೊಂಡಿದ್ದಾರೆ. ಅಧಿಕಾರಿಗಳ ವಿರುದ್ಧದ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಅನುಮತಿ ಕೇಳಿ ಸಲ್ಲಿಸುವ ಪ್ರಕರಣಗಳಲ್ಲಿ ರಾಜ್ಯ ಸರ್ಕಾರ ಮತ್ತು ಸಕ್ಷಮ ಪ್ರಾಧಿಕಾರಗಳು ಅದನ್ನು ಮಂಜೂರು ಮಾಡುವುದಕ್ಕಾಗಿ ತಿಂಗಳುಗಳ ಕಾಲ ಕಡತಗಳ ಬಾಕಿ ಉಳಿಸಿಕೊಳ್ಳುವಂತಿಲ್ಲ.