ಬೆಂಗಳೂರು: ಕಾವೇರಿ ನದಿ ನೀರಿನ ವಿಷಯದಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರದ ತಜ್ಞರ ತಂಡವನ್ನು ಕಳುಹಿಸಿಕೊಡಲಿ, ಜಲಾಶಯದ ನೀರಿನ ಮಟ್ಟವನ್ನು ನೋಡಲಿ. ಬೆಂಗಳೂರಿಗೆ ಕುಡಿಯುವ ನೀರು ಕೊಡದೆ ಇರುವ ಪರಿಸ್ಥಿತಿ ಇದೆ. ನಾವು ನೀರು ಬಿಡುವ ಪರಿಸ್ಥಿತಿಯಲ್ಲಿ ಇಲ್ಲ. ಇದರ ಬಗ್ಗೆ ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುವ ಎಲ್ಲಾ ಪ್ರಯತ್ನವನ್ನು ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಮಧ್ಯ ಪ್ರವೇಶಕ್ಕೆ ರಾಜ್ಯ ಸರ್ಕಾರ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿಎಸ್ವೈ, ಈಗಾಗಲೇ ಹೆಚ್.ಡಿ. ಕುಮಾರಸ್ವಾಮಿ ಅವರು ಕಾವೇರಿ ವಿಚಾರದ ಬಗ್ಗೆ ದೆಹಲಿಯಲ್ಲಿ ಚರ್ಚೆ ಮಾಡಿದ್ದಾರೆ. ಇದರ ಬಗ್ಗೆ ಎಲ್ಲರಿಗೂ ಮಾಹಿತಿ ಇದೆ. ಎಲ್ಲರೂ ಸರ್ಕಾರದ ಪರವಾಗಿ ಇದ್ದಾರೆ. ಯಾರು ಕೂಡ ಇದರ ವಿರೋಧ ಇಲ್ಲ. ಇದಕ್ಕೆ ಒಂದೇ ಮಾರ್ಗ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ತಜ್ಞರನ್ನು ಕಳುಹಿಸಿ ಇಲ್ಲಿನ ವಾಸ್ತವ ಸ್ಥಿತಿಯನ್ನು ಅವಲೋಕಿಸಬೇಕು. ಆ ನಂತರ ನೀವು ಏನು ತೀರ್ಮಾನ ತೆಗೆದುಕೊಳ್ಳುತ್ತಿರೋ ಅದಕ್ಕೆ ಬದ್ಧರಾಗಿ ತೀರ್ಮಾನ ಮಾಡುತ್ತೇವೆ ಎಂದರು.