ಬೆಂಗಳೂರು: ಕೇರಳ ಗಡಿ ರಸ್ತೆಗಳಲ್ಲಿ ಕರ್ನಾಟಕ ಸರ್ಕಾರ ವಿಧಿಸಿರುವ ಸಂಚಾರ ನಿರ್ಬಂಧವನ್ನು ತುರ್ತು ವೈದ್ಯಕೀಯ ಸೇವೆಗಳಿಗಾಗಿ ತಕ್ಷಣವೇ ತೆರವುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿ ಬುಧವಾರ ರಾತ್ರಿ ಕೇರಳ ಹೈಕೋರ್ಟ್ ಹೊರಡಿಸಿರುವ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ.
ರಾಜ್ಯ ಸರ್ಕಾರ ತನ್ನ ಅರ್ಜಿಯಲ್ಲಿ, ಕೇರಳ ಹೈಕೋರ್ಟ್ ತನ್ನ ಅಧಿಕಾರ ವ್ಯಾಪ್ತಿ ಮೀರಿ ಕೇಂದ್ರ ಸರ್ಕಾರಕ್ಕೆ ಮಧ್ಯಂತರ ಆದೇಶ ಮಾಡಿದೆ. ಕಾಸರಗೋಡಿನ ಕೊರೊನಾ ವೈರಸ್ ಸೋಂಕು ಪೀಡಿತರು ಕರ್ನಾಟಕಕ್ಕೆ ಪ್ರವೇಶಿಸಿ ತುರ್ತು ವೈದ್ಯಕೀಯ ಸೇವೆ ಪಡೆಯಲು ಅನುವಾಗುವಂತೆ ಕಾಸರಗೋಡು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಾಟಕ ಸರ್ಕಾರ ವಿಧಿಸಿರುವ ಸಂಚಾರ ನಿರ್ಬಂಧವನ್ನು ತೆರವುಗೊಳಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ.
ಕೇರಳ ಹೈಕೋರ್ಟ್ ನ ಈ ಆದೇಶದಿಂದ ಕರ್ನಾಟಕ ಹಾಗೂ ಕೇರಳ ಗಡಿಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಕಾಸರಗೋಡಿನ ಕೋವಿಡ್ -19 ಸೋಂಕಿತರು ಕರ್ನಾಟಕ ಪ್ರವೇಶ ಮಾಡಲು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಗಡಿ ಭಾಗದ ರಸ್ತೆಗಳನ್ನು ಮುಚ್ಚುವ ವಿಚಾರವು ನಮ್ಮ ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿದ್ದು, ಕೇರಳ ಹೈಕೋರ್ಟ್ ಮಧ್ಯಪ್ರವೇಶ ಮಾಡುವಂತಿಲ್ಲ.