ಬೆಂಗಳೂರು: ಕೊರೊನಾ ನಿಯಂತ್ರಣ ಒಂದು ಹಂತಕ್ಕೆ ಬರುತ್ತಿತ್ತು. ಈ ಸಂದರ್ಭದಲ್ಲಿ ಬ್ರಿಟನ್ ರೂಪಾಂತರಿ ಆತಂಕ ಹುಟ್ಟಿಸಿದೆ. ಹೊಸ ವರ್ಷಕ್ಕೆ ಹೆಚ್ಚು ಜನ ಸೇರುತ್ತಾರೆ. ಇದಕ್ಕಾಗಿ ಕೆಲವು ನಿರ್ಬಂಧ ಹೇರುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆರ್.ಟಿ.ನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಂದಾಯ ಸಚಿವರ ಜೊತೆ ಈ ಸಂಬಂಧ ಒಂದು ಸುತ್ತಿನ ಮಾತುಕತೆ ನಡೆದಿದೆ. ಬಿಬಿಎಂಪಿ ಮತ್ತು ನಗರ ಪೊಲೀಸ್ ಆಯುಕ್ತರು ಚರ್ಚಿಸಿ ಮಾರ್ಗಸೂಚಿ ಸಿದ್ಧಪಡಿಸ್ತಾರೆ. ಹೊರ ದೇಶಗಳಿಂದ ಬರುವವರ ಮೇಲೆ ನಿಗಾ ಇಡಲಾಗುತ್ತದೆ. ವಿಮಾನ ನಿಲ್ದಾಣಗಳಲ್ಲಿ ವಿಶೇಷ ನಿಗಾ ಇರಿಸಲಾಗತ್ತದೆ. ಯುರೋಪ್ ದೇಶಗಳಿಂದ ಬಂದವರಿಗೆ ಪರೀಕ್ಷೆ ನಡೆಸಲಾಗುತ್ತದೆ. ಈಗಾಗಲೇ ಬಂದವರ ಟ್ರೇಸ್ ಮಾಡಲು ಪೊಲೀಸರಿಗೆ ಸೂಚಿಸಲಾಗಿದೆ. ಬೆಂಗಳೂರು ಮತ್ತು ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ಬಿಗಿ ನಿಗಾ ವಹಿಸಲಾಗುತ್ತದೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ವಿಷ್ಣು ಪ್ರತಿಮೆ ಹಾನಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ನಗರ ಪೊಲೀಸ್ ಆಯುಕ್ತರು ಇದರ ಬಗ್ಗೆ ಈಗಾಗಲೇ ಮಾತಾಡಿದ್ದಾರೆ. ಸೂಕ್ತ ಕ್ರಮಕ್ಕೆ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.