ಬೆಂಗಳೂರು: ಗರ್ಭಿಣಿ ಮತ್ತು ಬಾಣಂತಿಯರಿಗೆ ರಾಜ್ಯಾದ್ಯಂತ ಮನೆ ಮನೆಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಸುವ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಸಚಿವೆ ಶಶಿಕಲಾ ಜೊಲ್ಲೆ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆ ಶಾಸಕ ಸಂಜೀವ್ ಮಠಂದೂರ್ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಮಡಿಕೇರಿ, ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಗರ್ಭಿಣಿ ಮತ್ತು ಬಾಣಂತಿಯರಿಗೆ ಮನೆ ಮನೆಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಇದು ರಾಜ್ಯಾದ್ಯಂತ ವಿಸ್ತರಣೆಯಾಗಬೇಕೆಂಬ ಬೇಡಿಕೆಯಿದೆ. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಕೋವಿಡ್ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳು ಮುಚ್ಚಿರುವುದರಿಂದ ಮಾತೃಪೂರ್ಣ ಯೋಜನೆಯಡಿ ಗರ್ಭಿಣಿ ಹಾಗೂ ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ಬರಲು ಸಾಧ್ಯವಾಗುವುದಿಲ್ಲ ಎಂಬ ಕಾರಣಕ್ಕೆ ಅವರ ಮನೆ ಬಾಗಿಲಿಗೆ ಕಚ್ಚಾ ಆಹಾರ ಪದಾರ್ಥಗಳನ್ನು ವಿತರಿಸಿದ್ದೆವು. ಅಂಗನವಾಡಿ ಕೇಂದ್ರಗಳು ತೆರೆದ ನಂತರ ಈ ಹಿಂದೆ ಇದ್ದಂತೆ ಕೇಂದ್ರಗಳಲ್ಲಿಯೇ ಮಧ್ಯಾಹ್ನ ಬಿಸಿಯೂಟ ನೀಡಲಾಗುತ್ತಿದೆ ಎಂದು ಉತ್ತರಿಸಿದರು.