ಕರ್ನಾಟಕ

karnataka

ETV Bharat / state

ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು ಕೇಂದ್ರದಿಂದ ಮೂರನೇ ಸಂಚು: ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ - ಕೇಂದ್ರ ಗೃಹ ಸಚಿವ ಅಮಿತ್ ಶಾ

ಅಮುಲ್​ ಹಾಲಿನ ಉತ್ಪನ್ನಗಳನ್ನು ಕರ್ನಾಟಕದಲ್ಲಿ ಆನ್​ಲೈನ್​ ಮೂಲಕ ಮಾರಾಟ ಮಾಡುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಸರಣಿ ಟ್ವೀಟ್​ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು.

H D Kumaraswamy
ಹೆಚ್​ ಡಿ ಕುಮಾರಸ್ವಾಮಿ

By

Published : Apr 8, 2023, 11:23 AM IST

Updated : Apr 8, 2023, 12:19 PM IST

ಬೆಂಗಳೂರು: ಕನ್ನಡಿಗರ ಜೀವನಾಡಿ ನಂದಿನಿ ಮುಗಿಸಲು ಈಗ ನಡೆದಿದೆ 3ನೇ ಸಂಚು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು,’’ಸಂಚು 1: ಅಮುಲ್ ಜತೆ ನಂದಿನಿ ವಿಲೀನ; ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ. ಸಂಚು 2: ಮೊಸರಿನ ಮೇಲೆ ಹಿಂದಿಯ 'ದಹಿ' ಪದ ಮುದ್ರಣ. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲ. 3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಸರ್ಕಾರ ಹೊರಟಿದೆ‘‘ ಎಂದು ಕಿಡಿಕಾರಿದ್ದಾರೆ.

ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕು ಎನ್ನುವುದು ಅಮುಲ್ ದುರಾಲೋಚನೆ. 'ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್' ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಆರೋಪಿಸಿದ್ದಾರೆ.

’’ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್​ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್​ನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ. ಕೆಎಂಎಫ್ ಜತೆ ಅಮುಲ್ ಅನಗತ್ಯ ಸ್ಪರ್ಧೆ ನಡೆಸಿ ದಿನದಿಂದ ದಿನಕ್ಕೆ ನಂದಿನಿಯನ್ನು ತುಳಿಯುವ ಹುನ್ನಾರ ನಡೆಸುತ್ತಿದೆ. ಇದು ಸ್ಪಷ್ಟ. ಸಹಕಾರಿ ಕ್ಷೇತ್ರದ ಪ್ರಸಿದ್ಧ ಸೋದರ ಸಂಸ್ಥೆಗಳ ನಡುವೆ ಅನಾರೋಗ್ಯಕರ ಪೈಪೋಟಿ ಯಾರಿಗೂ ಹಿತವಲ್ಲ. ಕೆಎಂಎಫ್ ರಾಜ್ಯದ ಸಾವಿರಾರು ಗ್ರಾಮಗಳ ಸಹಕಾರ ಸಂಘಗಳ ಮೂಲಕ ರೈತರಿಂದಲೇ ಹಾಲನ್ನು ನೇರವಾಗಿ ಖರೀದಿಸುತ್ತದೆ‘‘ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಡಬಲ್ ಎಂಜಿನ್ ಸರ್ಕಾರ ನಮ್ಮ ರಾಜ್ಯದ ಹಾಲು ಉತ್ಪಾದಕರನ್ನು ಬೀದಿಗೆ ತಳ್ಳಿ ಗುಜರಾತಿಗಳ ಗುಲಾಮರನ್ನಾಗಿ ಮಾಡುವ ಹುನ್ನಾರ ನಡೆಸಿರುವುದು ಸ್ಪಷ್ಟ. ಇದುರೆಗೂ ಇಷ್ಟೆಲ್ಲಾ ಆದರೂ ರಾಜ್ಯ ಬಿಜೆಪಿ ಸರ್ಕಾರದ ದಿವ್ಯಮೌನ, ಕೆಎಂಎಫ್ ನಿಷ್ಕ್ರಿಯತೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.

ಗುಜರಾತಿನಲ್ಲಿ ಎಂದೂ ಕೆಎಂಎಫ್ ಹಾಲು ಮಾರಿದ್ದಿಲ್ಲ. ಅದು ಅಮುಲ್​ನ ಸ್ಥಳೀಯ ಮಾರುಕಟ್ಟೆ ಹಿತ, ಸಹಕಾರಿ ತತ್ವವನ್ನು ಗೌರವಿಸಿದೆ. ಹಾಲು ಸಮೃದ್ಧಿ ಇರುವ ಯಾವುದೇ ಮಹಾಮಂಡಳದ ಸ್ಥಳೀಯ ವ್ಯಾಪ್ತಿಯಲ್ಲಿ ಕೆಎಂಎಫ್ ತನ್ನ ಹಾಲನ್ನು ಮಾರಲ್ಲ. ಕರ್ನಾಟಕ ನೈಜ ಸಹಕಾರ ತತ್ತ್ವ ನಂಬಿದ್ದರೆ, ಗುಜರಾತ್ ಅಸಹಕಾರವನ್ನೇ ನಂಬಿದೆ. ಕನ್ನಡಿಗರಿಗೆ ಅಮುಲ್ ಋಣಿ ಇರಬೇಕು.

ಹೆಚ್.ಡಿ. ದೇವೇಗೌಡರು ಪ್ರಧಾನಿ ಆಗಿದ್ದಾಗ, ಹೆಚ್.ಡಿ. ರೇವಣ್ಣ ಅವರು ಕೆಎಂಎಫ್ ಅಧ್ಯಕ್ಷರಾಗಿದ್ದಾಗ ಯಲಹಂಕ ಮದರ್ ಡೈರಿಯಲ್ಲಿ ವಿಶೇಷ ಐಸ್ ಕ್ರೀಮ್ ಘಟಕ ಸ್ಥಾಪಿಸಿ, ಈ ಘಟಕದಿಂದ ದಶಕಗಳಿಂದ ನಿತ್ಯವೂ ಕೆಎಂಎಫ್ ದೊಡ್ಡ ಪ್ರಮಾಣದಲ್ಲಿ ಅಮುಲ್ ಬ್ರ್ಯಾಂಡ್​ ಐಸ್​ಕ್ರೀಮ್ ತಯಾರಿಸಿ ಈಗಲೂ ಕೊಡುತ್ತಿದೆ. ಅಷ್ಟೇ ಅಲ್ಲ, ರಾಜ್ಯ ಸರ್ಕಾರವು ಗುಜರಾತ್ ಹಾಲು ಮಹಾಮಂಡಳಿ ಅಮುಲ್​ಗೆ ಬೆಂಗಳೂರಿನ ಕೋರಮಂಗಲದಲ್ಲಿ ಅತೀ ಕಡಿಮೆ ದರಕ್ಕೆ ಬೆಲೆ ಬಾಳುವ ಬೃಹತ್ ಜಾಗ ನೀಡಿದೆ. ಇಷ್ಟು ಔದಾರ್ಯ ತೋರಿದ ಕರ್ನಾಟಕ ಹಾಲು ಉತ್ಪಾದಕರು ಮತ್ತು ಕೆಎಂಎಫ್​ಗೆ ದೊಡ್ಡ ಖೆಡ್ಡಾ ತೋಡಲು ಅಮುಲ್ ಹೊರಟಿದೆ ಎಂದು ಹೆಚ್​ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರಾದ ನಾವು ತಕ್ಷಣ ಎಚ್ಚೆತ್ತು ನಂದಿನಿಯನ್ನೇ ಅವಲಂಬಿಸಿರುವ ರಾಜ್ಯದ ರೈತರ ಹಿತವನ್ನು ಆದ್ಯತೆಯಲ್ಲಿ ರಕ್ಷಿಸಿ ಉಳಿಸಿಕೊಳ್ಳಬೇಕು. ನಮ್ಮ ಜನತೆ -ಗ್ರಾಹಕರು ನಂದಿನಿ ಉತ್ಪನ್ನಗಳನ್ನಷ್ಟೇ ಆದ್ಯತೆಯ ಮೇರೆಗೆ ಬಳಸಿ ರಾಜ್ಯದ ರೈತರ ಬದುಕನ್ನು ಕಾಪಾಡಬೇಕು. ಇಲ್ಲಿನ ಡಬಲ್ ಎಂಜಿನ್ ರಾಜ್ಯ ಸರ್ಕಾರ ಈಗಲಾದರೂ ಎಚ್ಚೆತ್ತು ತಕ್ಷಣ ರಾಜ್ಯದಲ್ಲಿ ಅಮುಲ್​ ಪ್ಯಾಕೆಟ್ ಹಾಲಿನ ಮಾರಾಟಕ್ಕೆ ತಡೆ ಒಡ್ಡಬೇಕು. ಕೇಂದ್ರದ ಒತ್ತಾಸೆಯಿಂದ ಅಮುಲ್ ಕದ್ದುಮುಚ್ಚಿ ಹಿಂಬಾಗಿಲ ಮೂಲಕ ಬರುತ್ತಿದೆ. ಕೆಎಂಎಫ್ ಮತ್ತು ರೈತರ ಕುತ್ತಿಗೆಗೆ ಕುಣಿಕೆ ಬಿಗಿಯುತ್ತಿರುವ ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಕನ್ನಡಿಗರು ಅಮುಲ್ ಉತ್ಪನ್ನ ಖರೀದಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು: ಸಿದ್ದರಾಮಯ್ಯ

Last Updated : Apr 8, 2023, 12:19 PM IST

ABOUT THE AUTHOR

...view details