ಬೆಂಗಳೂರು: ಕೊರೊನಾ ಸೋಂಕಿನ ಆರ್ಭಟದ ನಡುವೆಯೇ ನಾಳೆ ಬೆಳಗಾವಿ ಲೋಕಸಭಾ ಕ್ಷೇತ್ರ ಹಾಗೂ ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಡೆಯಲಿದ್ದು, ನಾಳಿನ ಫಲಿತಾಂಶದ ಬಗ್ಗೆ ರಾಜಕೀಯ ಪಕ್ಷಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಇನ್ನು, ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಶಾಸಕ ಸ್ಥಾನಕ್ಕೆ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರಿಂದ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿದ್ದು, ಅಲ್ಲಿ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಂದ ಒಟ್ಟು 30 ಅಭ್ಯರ್ಥಿಗಳು ಕಣದಲ್ಲಿದ್ದು, ಎಲ್ಲ ಅಭ್ಯರ್ಥಿಗಳ ಭವಿಷ್ಯ ನಾಳೆ ನಿರ್ಧಾರವಾಗಲಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಇದೇ ತಿಂಗಳ 17ರಂದು ಮತದಾನ ನಡೆದಿತ್ತು. 15 ದಿನಗಳ ಬಳಿಕ ಮತ ಎಣಿಕೆ ನಾಳೆ ನಡೆಯಲಿದೆ.
ಮೂರೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಈ ಪೈಕಿ ಜೆಡಿಎಸ್ ಬಸವಕಲ್ಯಾಣ ಕ್ಷೇತ್ರದಲ್ಲಿ ಮಾತ್ರ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಉಪಚುನಾವಣೆಯ ಗಮನಾರ್ಹ ಅಂಶವೆಂದರೆ, ಮೂರೂ ಕ್ಷೇತ್ರಗಳಲ್ಲೂ ಪ್ರತಿಪಕ್ಷ ಕಾಂಗ್ರೆಸ್ ಆಡಳಿತಾರೂಢ ಬಿಜೆಪಿಗೆ ತೀವ್ರ ಪೈಪೋಟಿ ನೀಡಿದೆ. ಹೀಗಾಗಿಯೇ, ಎಲ್ಲ ಕ್ಷೇತ್ರಗಳಲ್ಲೂ ಗೆಲುವಿನ ಮತಗಳ ಅಂತರ ಹೆಚ್ಚು ಇರುವುದಿಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.
ಮತ ಎಣಿಕೆಗೆ ಸಿದ್ದತೆ :ಕೊರೊನಾ ಸೋಂಕಿನ ನಡುವೆ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯ ನಾಳೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಇದಕ್ಕೆ ಈಗಾಗಲೇ ಸಂಬಂಧಪಟ್ಟ ಜಿಲ್ಲಾಡಳಿತಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ.
ಮತ ಎಣಿಕೆ ವೇಳೆ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ನಿಧರಿಸಲಾಗಿದ್ದು, ಮತ ಎಣಿಕೆ ಟೇಬಲ್‌ಗಳ ನಡುವೆ ಸಾಕಷ್ಟು ಅಂತರ ಕಾಯಲು ತೀರ್ಮಾನಿಸಲಾಗಿದೆ.
ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ, ಸಿಬ್ಬಂದಿ, ಪಕ್ಷಗಳ ಏಜೆಂಟರುಗಳಿಗೆ, ಪೊಲೀಸರಿಗೆ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಎಲ್ಲರಿಗೂ ಮಾಸ್ಕ್, ಗೌಸ್ ನೀಡಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತ ಜನ ಸೇರದಂತೆ ಕ್ರಮ ಕೈಗೊಳ್ಳಲಾಗಿದ್ದು, ವಿಜಯೋತ್ಸವಕ್ಕೆ ನಿಷೇಧ ಹೇರಲಾಗಿದೆ.
ಬೆಳಗಾವಿ ಲೋಕಸಭೆ ಉಪ ಚುನಾವಣೆ ಮತ ಎಣಿಕೆ ನಗರದ ಆರ್‌ಪಿಡಿ ಕಾಲೇಜಿನಲ್ಲಿ ನಡೆಯಲಿದ್ದು, ಮಸ್ಕಿ ಉಪ ಚುನಾವಣೆ ಮತ ಎಣಿಕೆ ಕಾರ್ಯ ರಾಯಚೂರು ನಗರದ ಎಸ್‌ಆರ್‌ಪಿಎಸ್ ಕಾಲೇಜಿನಲ್ಲಿ ನಡೆದರೆ ಬಸವಕಲ್ಯಾಣ ಉಪಚುನಾವಣೆ ಮತ ಎಣಿಕೆಗೆ ಬೀದರ್‌ನ ಬಿವಿಬಿ ಕಾಲೇಜಿನಲ್ಲಿ ನಡೆಯಲಿದೆ. ಭದ್ರತೆಗಾಗಿ ಸುಮಾರು 800ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.