ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಸೋಮಣ್ಣ ಬೇವಿನಮರದ ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿಂದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೋಮಣ್ಣ ಬೇವಿನಮರದ ಅವರನ್ನು ಪಕ್ಷ ನಿರಾಶೆಗೊಳಿಸಿತ್ತು. ಗೃಹ ಸಚಿವರಾಗಿರುವ ಬಸವರಾಜ್ ಬೊಮ್ಮಾಯಿಗೆ ಟಿಕೆಟ್ ನೀಡಲು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಬಿ ಎಸ್ ಯಡಿಯೂರಪ್ಪ ನಿರ್ಧರಿಸಿದ್ದರು. ಟಿಕೆಟ್ ಲಭಿಸದೆ ಬೇಸರಗೊಂಡ ಬೇವಿನಮರದ, ತಮ್ಮ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಸಾಕಷ್ಟು ಮನವೊಲಿಸುವ ಪ್ರಯತ್ನ ನಡೆದರೂ ಕೂಡ ನಾಮಪತ್ರ ವಾಪಸ್ ಪಡೆದಿರಲಿಲ್ಲ. ಕಣದಲ್ಲಿದ್ದು 7,203 ಮತ ಪಡೆದಿದ್ದು, ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಗೆಲುವು ಸಾಧಿಸಿದರು. ಸೋಮಣ್ಣ ಬೇವಿನಮರದ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿತ್ತು.