ಬೆಂಗಳೂರು: ಅರಬ್ಬಿಸಮುದ್ರದ ಆಗ್ನೇಯ ಭಾಗದ ಕೇರಳ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪೂರ್ವ ಅರಬ್ಬಿಸಮುದ್ರದ ಕರ್ನಾಟಕ, ಕೇರಳದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ಪ್ರದೇಶವಿದೆ. ಇದರ ಪರಿಣಾಮ ಆಗಸ್ಟ್ 29ಮತ್ತು 30ರಂದು ರಾಜ್ಯದ ಆರು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ. ಎಸ್. ಪಾಟೀಲ್ ತಿಳಿಸಿದ್ದಾರೆ.
ಆಗಸ್ಟ್ 30ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಭಾರಿ ಹಾಗೂ ಅತಿ ಹೆಚ್ಚು ಮಳೆ ನಿರೀಕ್ಷಿಸಿದ್ದು, ಆಗಸ್ಟ್ 27 ಮತ್ತು 28ರಂದು ಯೆಲ್ಲೋ ಅಲರ್ಟ್ ಹಾಗೂ ಆಗಸ್ಟ್ 29 ಮತ್ತು 30ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ.