ಬೆಂಗಳೂರು: ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಹೊನ್ನಾವರದಲ್ಲಿ 14 ಸೆಂ.ಮೀ ಹಾಗೂ ಕುಂದಾಪುರದಲ್ಲಿ 11 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದ್ದು ಮಾನ್ಸೂನ್ ದುರ್ಬಲವಾಗಿದೆ. ಅಲ್ಲದೆ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಕೊಡಗಿನಲ್ಲಿ 17 ಸೆಂ.ಮೀ. ಹಾಗೂ ಆಗುಂಬೆಯಲ್ಲಿ 9 ಸೆಂ.ಮೀ. ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಆ.9 ರಿಂದ 13ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದ್ದು, ಆ.9 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗೆ ಉತ್ತರ ಕನ್ನಡ ಜಿಲ್ಲೆಯಲ್ಲೂ ಅರೆಂಜ್ ಅಲರ್ಟ್ ಘೋಷಿಸಲಾಗಿದೆ.