ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಪಕ್ಷದ ವರಿಷ್ಠರ ಭೇಟಿಗೆ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯದ ವಿವಿಧ ವಿಚಾರಗಳ ಕುರಿತು ಚರ್ಚೆಗೆ ಪಕ್ಷದ ಹೈಕಮಾಂಡ್ ನಾಯಕರು ಬುಲಾವ್ ನೀಡಿರುವ ಹಿನ್ನೆಲೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಮತ್ತಿತರ ನಾಯಕರು ದೆಹಲಿಗೆ ತೆರಳುತ್ತಿದ್ದಾರೆ.
ನಾಳೆ ಬೆಳಗ್ಗೆ ಪ್ರಯಾಣ ಬೆಳೆಸುವ ಕಾಂಗ್ರೆಸ್ ನಾಯಕರುಮ, ಮಧ್ಯಾಹ್ನ 12.45ಕ್ಕೆ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಹಾಗೂ ಮತ್ತಿತರರನ್ನ ಭೇಟಿಯಾಗಿ ಚರ್ಚಿಸಲಿದ್ದಾರೆ. ಇದಲ್ಲದೇ ರಾತ್ರಿ ದೆಹಲಿಯಲ್ಲಿ ವಾಸ್ತವ್ಯ ಹೂಡುವ ರಾಜ್ಯ ನಾಯಕರು ಪಕ್ಷದ ವರಿಷ್ಠರ ಜೊತೆಗೆ ಸಮಾಲೋಚಿಸಲಿದ್ದಾರೆ.
ಶುಕ್ರವಾರ ಬೆಳಗ್ಗೆ ದೆಹಲಿಯಿಂದ ಹೊರಟು ರಾಜ್ಯಕ್ಕೆ ಆಗಮಿಸಲಿದ್ದಾರೆ. ಮುಂಬರುವ ಬಜೆಟ್ ಅಧಿವೇಶನದಲ್ಲಿ ಪಕ್ಷದ ನಿಲುವು ಸಂಬಂಧ ಚರ್ಚಿಸುವುದು, ಚುನಾವಣಾ ವರ್ಷದಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಹೋರಾಟಗಳು, ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ವಿವಿಧ ಸಮಿತಿಗಳ ರಚನೆಗೆ ಒತ್ತುಕೊಡುವುದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆ ಮಾಡುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಇದನ್ನೂ ಓದಿ : ಅಧಿವೇಶನದಲ್ಲಿಆಹೋರಾತ್ರಿ ಧರಣಿ; ಕಾಂಗ್ರೆಸ್ ಸಾಧಿಸಿದ್ದೇನು? ರಾಜಕೀಯ ಲಾಭ- ನಷ್ಟದ ಲೆಕ್ಕಾಚಾರ
ಪಕ್ಷದ ರಾಷ್ಟ್ರೀಯ ನಾಯಕರು ನೀಡುವ ಸೂಚನೆ ಹಾಗೂ ಮಾರ್ಗದರ್ಶನ ಆಧರಿಸಿ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕಾಂಗ್ರೆಸ್ ನಾಯಕರು ಮುಂದಾಗಲಿದ್ದಾರೆ. ಅತ್ಯಂತ ಪ್ರಮುಖವಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಹಾಗೂ ಲೋಕಸಭೆ ಚುನಾವಣೆಗೆ ಹೆಚ್ಚಿನ ಸಂಸದರನ್ನು ರಾಜ್ಯದಿಂದ ಕಳಿಸಿ ಕೊಡುವ ಜವಾಬ್ದಾರಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ವರಿಷ್ಠರು ವಹಿಸುವ ಸಾಧ್ಯತೆ ಹೆಚ್ಚಿದೆ.