ಬೆಂಗಳೂರು: ಕರ್ನಾಟಕ ಪರೀಕ್ಷಾ ಮಂಡಳಿಯಲ್ಲಿ ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ವೇಳೆ ಅರ್ಜಿಯಲ್ಲಿ ತಪ್ಪು ಮಾಹಿತಿ ಕೊಡದ ಹಾಗೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆದಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಸಿಇಟಿ ಅರ್ಜಿ ತುಂಬುವಾಗ ಅನೇಕ ತಾಂತ್ರಿಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದು, ಅವರಿಗೆ ಪಿಯುಸಿ ಹಂತದಲ್ಲೇ ಕಲಿಸುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಮತ್ತು ಅವರ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾಖಲಾತಿಯಲ್ಲಿ ಒಂದು ಹೆಸರು ಇರುತ್ತದೆ, ಅರ್ಜಿ ತುಂಬುವಾಗ ಒಂದು ಹೆಸರು ಕೊಡುತ್ತಾರೆ. ಈ ರೀತಿಯ ತಪ್ಪುಗಳು ಆಗುತ್ತಿವೆ. ಇದನ್ನು ಸರಿ ಮಾಡುವುದಕ್ಕೆ ಒಂದಿಷ್ಟು ಸಮಯ ತೆಗೆದುಕೊಳ್ಳುತ್ತಾರೆ. ಹಾಗಾಗಿ ಇದನ್ನು ಸರಿಪಡಿಸುವುದು ಹೇಗೆ ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದರು.