ಬೆಂಗಳೂರು:ಕೇವಲ ರಾಜಕೀಯ, ಚುನಾವಣೆ, ಪ್ರಚಾರದಲ್ಲಿ ಮುಳುಗೇಳುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ಆಡಳಿತದ ಕರಾಳ ಮುಖದ ಬಗ್ಗೆ (ಮಂಡ್ಯದ ಘಟನೆ) ಸ್ವಲ್ಪ ಹೊತ್ತಿನ ಹಿಂದೆ ನಾನು ಟ್ವೀಟ್ ಮಾಡಿದ್ದೆ. ಆದರೆ, ಅದಕ್ಕಿಂತ ಭಯಾನಕ ಹಾಗೂ ಕರುಳು ಹಿಂಡುವ, ಇಡೀ ಕರ್ನಾಟಕವೇ ತಲೆ ತಗ್ಗಿಸುವ ದುರ್ಘಟನೆ ತುಮಕೂರಿನಲ್ಲಿ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಆರೋಗ್ಯ ಇಲಾಖೆ ಅದೆಷ್ಟು ಹಾಳಾಗಿ ಹೋಗಿದೆ ಎನ್ನುವುದಕ್ಕೆ ಇದಕ್ಕಿಂತ ದುರಂತ ಸಾಕ್ಷಿ ಇನ್ನೊಂದಿಲ್ಲ. ಈ ಹದಗೆಟ್ಟ ಆರೋಗ್ಯ ವ್ಯವಸ್ಥೆ ತುಮಕೂರಿನಲ್ಲಿ ಅನಾಥ ಬಾಣಂತಿಯ ಜೊತೆಗೆ ಹುಟ್ಟಿದೊಡನೆ ಎರಡು ಹಸುಗೂಸುಗಳನ್ನು ಬಲಿ ತೆಗೆದುಕೊಂಡಿದೆ. ಅಭಿವೃದ್ಧಿ, ಆವಿಷ್ಕಾರ ಎಂದೆಲ್ಲ ಬೀಗುವ ಈ ಸರ್ಕಾರ ನಾಚಿಕೆಯಿಂದ ತಲೆ ತಗ್ಗಿಸಬೇಕಿದೆ ಎಂದು ಟೀಕಿಸಿದ್ದಾರೆ.
ಪ್ರಸವ ವೇದನೆಯಿಂದ ಬಳಲುತ್ತಿದ್ದ ತುಮಕೂರಿನ ಭಾರತೀನಗರದ ಶ್ರೀಮತಿ ಕಸ್ತೂರಿ (30) ಎಂಬ ಮಹಿಳೆಯನ್ನು ಗುರುವಾರ ತಡರಾತ್ರಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ, ಕರ್ತವ್ಯದಲ್ಲಿದ್ದ ವೈದ್ಯೆ, ಆ ಗರ್ಭಿಣಿಗೆ ಹೆರಿಗೆ ಮಾಡಿಸದೆ ತಾಯಿ ಕಾರ್ಡ್ ಮಾಡಿಸಿಲ್ಲ ಎನ್ನುವ ನೆಪ ಹೇಳಿ ನಿರ್ದಯವಾಗಿ ವಾಪಸ್ ಕಳಿಸಿದ್ದಾರೆ.
ಹೆರಿಗೆ ನೋವಿನಿಂದ ನರಳುತ್ತಿದ್ದ ಆ ಮಹಿಳೆ, ತನಗೆ ಹೆರಿಗೆ ಮಾಡಿಸಿ ಎಂದು ಆ ವೈದ್ಯೆಯನ್ನು ಪರಿಪರಿಯಾಗಿ ಅಂಗಲಾಚಿದ್ದಾರೆ. ಆದರೆ, ದರ್ಪದಿಂದ ವರ್ತಿಸಿದ ವೈದ್ಯೆ, ಹೆರಿಗೆ ಮಾಡಿಸದೇ ಮಾನವೀಯತೆಯನ್ನೇ ಮರೆತು ಆಕೆಯನ್ನು ವಾಪಸ್ ಕಳುಹಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೋಗಿ ಹೆರಿಗೆ ಮಾಡಿಸಿಕೋ ಎಂದು ತಾಕೀತು ಮಾಡಿದ್ದರು ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.